ಬೆಂಗಳೂರು: ಕರ್ನಾಟಕದ ಏಳಿಗೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಡಬಲ್ ಇಂಜಿನ್ ರೀತಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೋವಿಡ್ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಈ ಡಬಲ್ ಇಂಜಿನ್ಗಳು ಕೆಟ್ಟು ನಿಂತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಸದಾಶಿವನಗರದ ನಿವಾಸದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಚಾಮರಾಜನಗರದಲ್ಲಿ 24 ಜನರ ಸಾವಿಗೆ ಸರ್ಕಾರವೇ ಹೊಣೆ ಎಂದು ಹೈಕೋರ್ಟ್ ನೇಮಕ ಮಾಡಿದ್ದ ನ್ಯಾಯಮೂರ್ತಿಗಳ ಸಮಿತಿ ಈಗಾಗಲೇ ವರದಿ ಕೊಟ್ಟಿದೆ. ಇದಕ್ಕೆ ಸರ್ಕಾರದ ಯಾರು ಹೊಣೆಗಾರರು ಎಂದು ನೀವೇ ತೀರ್ಮಾನಿಸಿ. ಈ ಸಾವುಗಳಿಗೆ ಸರ್ಕಾರ ನೈತಿಕ ಹೊಣೆ ಹೊರಬೇಕು ಎಂದರು.
ಇನ್ನು ಮುಖ್ಯಮಂತ್ರಿಗಳು ಬೌರಿಂಗ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಈಗ ಸುಮ್ಮನಾಗಿದ್ದಾರೆ. ಕೇಂದ್ರದಿಂದ ಎಷ್ಟು ಪ್ರಮಾಣದಲ್ಲಿ ಲಸಿಕೆ ಬರುತ್ತಿದೆ ಎಂಬುದರ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ಇಲ್ಲವೇ? ಲಸಿಕೆ ವಿತರಣೆ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು. ರಾಜ್ಯ ಸರ್ಕಾರ ಯಾಕೆ ಸುಮ್ಮನಿದೆಯೋ ಗೊತ್ತಿಲ್ಲ. ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರನ್ನು ದೇವರೇ ಕಾಪಾಡಬೇಕು. ಇವರಲ್ಲಿ ಯಾರಾದರೂ ಒಬ್ಬರು ರಾಜ್ಯದ ಪರವಾಗಿ ಧ್ವನಿ ಎತ್ತಿದ್ದಾರಾ? ಜನರಿಗೆ ನೆರವಾಗಿದ್ದಾರಾ? ಎಂದು ಪ್ರಶ್ನಿಸಿದರು.
ಲಸಿಕೆ ಉಚಿತವಾಗಿ ನೀಡುತ್ತೇವೆ ಎಂದರು 18-44ರ ವಯೋಮಾನದವರಿಗೆ ಲಸಿಕೆ ಅಂತಾ ಮೇ 1ರಂದು ಉದ್ಘಾಟನೆಯನ್ನೂ ಮಾಡಿದರು. ಇವತ್ತು ಲಸಿಕೆ ಕೊಡಲು ಆಗಲ್ಲ ಅಂತಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿರುವ ಡಬಲ್ ಇಂಜಿನ್ ಸರ್ಕಾರ ಬಹಳ ಚೆನ್ನಾಗಿ ಆಡಳಿತ ಮಾಡಲಿವೆ ಎಂದಿದ್ದರು. ಆದರೆ ಈ ಡಬಲ್ ಇಂಜಿನ್ಗಳು ನಿಂತು ಹೋಗಿವೆ. ಆಕ್ಸಿಜನ್ ಪೂರೈಸುವಂತೆ ಆದೇಶಿಸಿ ಹೈಕೋರ್ಟ್ ರಾಜ್ಯದ ಜನರಿಗೆ ನ್ಯಾಯ ಒದಗಿಸಿತ್ತು. ಆದರೆ ಕೇಂದ್ರ ಸರ್ಕಾರ ಆಕ್ಸಿಜನ್ ಕಳುಹಿಸಿದೆ ಎಂದು ಇವರು ಶಹಬ್ಬಾಶ್ಗಿರಿ ತೆಗೆದುಕೊಳ್ಳುತ್ತಿದ್ದಾರೆ. ಅವರು ಯಾರಿಗಾದರೂ ಶಹಬ್ಬಾಶ್ಗಿರಿ ಕೊಡಲಿ, ಒಟ್ಟಾರೆ ಜನರ ಪ್ರಾಣ ಉಳಿಸಿದರೆ ಸಾಕು ಎಂದಿದ್ದಾರೆ.