ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಕೂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದಿನವಿಡೀ ಪ್ರಚಾರ ನಡೆಸಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹನುಮಂತರಾಯಪ್ಪ ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಚಂದ್ರಶೇಖರ್ ಸೇರ್ಪಡೆ:ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್ ಮುಖಂಡ ಬಿ.ಎಚ್. ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರನ್ನು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೆಡಿಎಸ್ ಪಕ್ಷದ ಬೆಂಗಳೂರು ನಗರ ಮಹಾ ಪ್ರಧಾನ ಕಾರ್ಯದರ್ಶಿ ಆಗಿದ್ದ ಚಂದ್ರಶೇಖರ್ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ಮುಖಂಡರನ್ನು ಡಿಕೆಶಿ ಪಕ್ಷಕ್ಕೆ ಬರಮಾಡಿಕೊಂಡರು. ಇದೇ ವೇಳೆ ಆರ್ಆರ್ ನಗರ ಕ್ಷೇತ್ರದ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರ ಗೆಲುವಿಗೆ ಶ್ರಮಿಸುವಂತೆ ಡಿಕೆಶಿ ಕಾರ್ಯಕರ್ತರಿಗೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಜೆಡಿಎಸ್ ವಕ್ತಾರ ಸಿದ್ದರಾಜು ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ಗೆ ಸೇರ್ಪಡೆಯಾದರು. ಶಾಸಕಿ ಸೌಮ್ಯ ರೆಡ್ಡಿ, ಆರ್ ಆರ್ ನಗರ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ್, ಮುಖಂಡ ಹನುಮಂತರಾಯಪ್ಪ ಉಪಸ್ಥಿತರಿದ್ದರು.
ಕಾರ್ಯಕರ್ತರ ಸಭೆ:ಆರ್ಆರ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜ್ಞಾನಭಾರತಿ ವಾರ್ಡ್ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸೋಮವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದರು. ಈ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಎಂ.ಡಿ ವಿಜಯದೇವ್, ಸತೀಶ್ ಗೌಡ ಮತ್ತಿತರ ಮುಖಂಡರು ಇದ್ದರು.