ಕರ್ನಾಟಕ

karnataka

ETV Bharat / state

ಡೆಲ್ಟಾ ಪ್ಲಸ್ ವೈರಸ್​ ಬಗ್ಗೆ ಆತಂಕ ಬೇಡ; ಸಚಿವ ಡಾ. ಕೆ. ಸುಧಾಕರ್

ಮೈಸೂರಿನಲ್ಲಿ ಡೆಲ್ಟಾ ವೈರಸ್​ ತಗುಲಿದ್ದ ರೋಗಿ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಹೊಸ ವೈರಾಣುವಿನಿಂದ ಸೋಂಕಿತರಿಗೆ ಹೆಚ್ಚು ಸಮಸ್ಯೆಯೇನೂ ಆಗಿಲ್ಲ. ಇವರ ಸಂಪರ್ಕಿತರಿಗೂ ಪರೀಕ್ಷೆ ಮಾಡಿಸಿ ನೋಡಿದಾಗಲೂ ನೆಗೆಟಿವ್ ವರದಿ ಬಂದಿದೆ. ಆದ್ದರಿಂದ ಡೆಲ್ಟಾ ಪ್ಲಸ್ ವೈರಸ್​ ಬಗ್ಗೆ ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

sudhakar
sudhakar

By

Published : Jun 25, 2021, 4:43 PM IST

ಬೆಂಗಳೂರು: ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಬಗ್ಗೆ ಹೆಚ್ಚೇನೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಡೆಲ್ಟಾ ಪ್ಲಸ್ ಸೋಂಕಿನ ಒಂದು ಪ್ರಕರಣ ಬೆಂಗಳೂರಿನಲ್ಲಿ ಮತ್ತು ಇನ್ನೊಂದು ಮೈಸೂರಿನಲ್ಲಿ ಕಂಡು ಬಂದಿದ್ದು, ಇಬ್ಬರೂ ಸೌಮ್ಯ ಲಕ್ಷಣಗಳನ್ನು ಹೊಂದಿದ ರೋಗಿಗಳಾಗಿದ್ದಾರೆ ಎಂದರು.

ಮೈಸೂರಿನ ರೋಗಿ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಹೊಸ ವೈರಾಣುವಿನಿಂದ ಸೋಂಕಿತರಿಗೆ ಹೆಚ್ಚು ಸಮಸ್ಯೆಯೇನೂ ಆಗಿಲ್ಲ. ಇವರ ಸಂಪರ್ಕಿತರಿಗೂ ಪರೀಕ್ಷೆ ಮಾಡಿಸಿ ನೋಡಿದಾಗಲೂ ನೆಗೆಟಿವ್ ವರದಿ ಬಂದಿದೆ. ಆದ್ದರಿಂದ ಈ ವೈರಾಣು ಬಗ್ಗೆ ವಿಶೇಷವಾಗಿ ಆತಂಕಪಡುವ ಅಗತ್ಯವಿಲ್ಲ. ಪ್ರತಿ ದಿನ ಜೀನೋಮ್ ಸೀಕ್ವೆನ್ಸಿಂಗ್ ಆಗುತ್ತಿರುತ್ತದೆ. ಈ ವೇಳೆ ವೈರಾಣು ಪತ್ತೆಯಾಗುತ್ತದೆ ಎಂದರು.

ಕೇರಳದಲ್ಲಿ ಸೋಂಕು ಹೆಚ್ಚಿದ್ದು, ಪಾಸಿಟಿವಿಟಿ ದರ 10% ಗಿಂತ ಅಧಿಕವಾಗಿದೆ. ನಮ್ಮ ರಾಜ್ಯ ಕೇರಳ ಗಡಿ ಹಂಚಿಕೊಳ್ಳುವುದರಿಂದ ಬಹಳ ಎಚ್ಚರಿಕೆಯಿಂದ ಇರಬೇಕು. ಅದೇ ರೀತಿ ಮಹಾರಾಷ್ಟ್ರ ಕೂಡ ಗಡಿ ಹಂಚಿಕೊಂಡಿದೆ. ಗಡಿಭಾಗದ ಜಿಲ್ಲೆಗಳಲ್ಲಿ ಹೆಚ್ಚು ಪರೀಕ್ಷೆ ಮಾಡಬೇಕು, ಮುಂಜಾಗ್ರತಾ ಕ್ರಮ ವಹಿಸಬೇಕು, ಅಲ್ಲಿಂದ ಒಳಬರುವ ಪ್ರಯಾಣಿಕರಿಗೆ ರ್ಯಾಂಡಮ್ ಪರೀಕ್ಷೆ ಮಾಡುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದರು.

ಗಡಿಭಾಗಗಳನ್ನು ಮುಚ್ಚುವುದು ಸಮಂಜಸವಲ್ಲ. ಆದರೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಸ್, ರೈಲು ಎಲ್ಲಿಂದ ಬಂದರೂ ಆಯಾ ನಿಲ್ದಾಣಗಳಲ್ಲಿ ಎಚ್ಚರ ವಹಿಸಬೇಕು. ಬೆಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಹುಬ್ಬಳ್ಳಿಯ ನಾಲ್ಕು ವೈದ್ಯಕೀಯ ಕಾಲೇಜುಗಳು ಹಾಗೂ ಮಂಗಳೂರು ಮತ್ತು ವಿಜಯಪುರ ಜಿಲ್ಲಾಸ್ಪತ್ರೆಗಳಲ್ಲಿ ಒಟ್ಟು 6 ಜೀನೋಮ್ ಸೀಕ್ವೆನ್ಸ್ ಲ್ಯಾಬ್ ಆರಂಭಿಸಲಾಗುತ್ತಿದೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಸಭೆಯಲ್ಲಿ ಕೋವಿಡ್ ನಿಯಂತ್ರಣ ಕ್ರಮ ಕುರಿತು ಚರ್ಚೆಯಾಗಲಿದೆ. ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ಚಿಕಿತ್ಸೆಯಲ್ಲಿ ಕೆಲ ವ್ಯತ್ಯಾಸ ಇದೆ. ಈ ಬಗ್ಗೆ ತಜ್ಞರು ತಿಳಿಸಿದ್ದಾರೆ ಎಂದರು.

500 ಸಾಂದ್ರಕ ಹಸ್ತಾಂತರ:

ಸ್ನೇಹ ಚಾರಿಟೇಬಲ್ ಟ್ರಸ್ಟ್ ವತಿಯಿಂದ 500 ಆಕ್ಸಿಜನ್ ಸಾಂದ್ರಕ, 10 ಸಾವಿರ ಕಾನ್ಸ್​ನ್​ಟ್ರೇಟರ್ ಟ್ಯೂಬ್ ಸರ್ಕಾರಕ್ಕೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡರು. ಕೋವಿಡ್ ನಿಯಂತ್ರಣಕ್ಕೆ 28 ಕೋಟಿ ರೂ. ಮೊತ್ತದ ಸಹಕಾರ ನೀಡುವುದಾಗಿ ಟ್ರಸ್ಟ್ ತಿಳಿಸಿದೆ. ಪೋಸ್ಟ್ ಕೋವಿಡ್​ಗಾಗಿ ಆಸ್ಪತ್ರೆ ನಿರ್ಮಿಸುವ ಕಾರ್ಯವನ್ನೂ ಮಾಡಲಾಗಿದೆ. ಇದಕ್ಕಾಗಿ ಟ್ರಸ್ಟ್​ಗೆ ಸಚಿವರು ಕೃತಜ್ಞತೆ ತಿಳಿಸಿದ್ರು.

ಇದನ್ನೂ ಓದಿ:ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರದ ಬಗ್ಗೆ ಅಧ್ಯಯನ ನಡೆಸಲು ಮುಂದಾದ ICMR-NIV

ABOUT THE AUTHOR

...view details