ಬೆಂಗಳೂರು: ಕೋವಿಡ್ ಮಾರ್ಗಸೂಚಿಗಳು ಹಾಗೂ ಲಾಕ್ಡೌನ್ ಜಾರಿಗಾಗಿ ಪೊಲೀಸರು ಅನಗತ್ಯ ಬಲ ಪ್ರಯೋಗ ಮಾಡುವುದು ಬೇಡ ಎಂದು ಹೈಕೋರ್ಟ್ ರಾ,ಜ್ಯ ಸರ್ಕಾರಕ್ಕೆ ಸೂಚಿಸಿದೆ.
ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರೊಬ್ಬರು ಪೀಠಕ್ಕೆ ಮಾಹಿತಿ ನೀಡಿ, ಪೊಲೀಸರು ಸಾರ್ವಜನಿಕರ ಮೇಲೆ ಅನಗತ್ಯ ಬಲ ಪ್ರಯೋಗ ಮಾಡುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಗಳು ಹಾಗೂ ಲಾಕ್ಡೌನ್ ನಿಯಮಗಳನ್ನು ಜಾರಿಗೊಳಿಸಲು ಸಿಕ್ಕಸಿಕ್ಕವರ ಮೇಲೆ ಲಾಠಿ ಪ್ರಹಾರ ಮಾಡುತ್ತಿದ್ದಾರೆ. ಕೋವಿಡ್ ರೋಗಿಯೊಬ್ಬರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಕಳೆದ 2020ರ ಮಾರ್ಚ್ 30ರಂದು ಅನಗತ್ಯವಾಗಿ ಬಲ ಪ್ರಯೋಗ ಮಾಡಬಾರದು ಎಂದು ಹೈಕೋರ್ಟ್ ನಿರ್ದೇಶಿಸಿದೆಯಲ್ಲವೇ ಎಂದು ಪ್ರಶ್ನಿಸಿತು. ಪೀಠಕ್ಕೆ ಉತ್ತರಿಸಿದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಎಲ್ಲಿಯೂ ಬಲ ಪ್ರಯೋಗ ಮಾಡುತ್ತಿಲ್ಲ. ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಹಾಗೊಂದು ವೇಳೆ ಪೊಲೀಸರಿಂದ ಸಮಸ್ಯೆಯಾಗುತ್ತಿದ್ದರೆ ಇಂದೇ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಜೊತೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗುವುದು ಎಂದರು.
ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಪೀಠ, ನಾಗರಿಕರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸರ್ಕಾರಕ್ಕೆ ಅಗತ್ಯ ಸಹಕಾರ ನೀಡಬೇಕು. ಇದೇ ವೇಳೆ ಸರ್ಕಾರ ಮಾರ್ಗಸೂಚಿಗಳನ್ನು ಜಾರಿ ಮಾಡುವ ವೇಳೆ ಅನಗತ್ಯ ಬಲ ಪ್ರಯೋಗ ಮಾಡದಂತೆ ಪೊಲೀಸರಿಗೆ ನಿರ್ದೇಶಿಸಬೇಕು. ಈ ಸಂಬಂಧ ಮುಂದಿನ ವಿಚಾರಣೆ ವೇಳೆ ಸ್ಪಷ್ಟನೆ ನೀಡಬೇಕು ಎಂದು ಸೂಚಿಸಿ ಮೇ 13ಕ್ಕೆ ವಿಚಾರಣೆ ಮುಂದೂಡಿತು.
ಇದನ್ನೂ ಓದಿ:ಪೊಲೀಸರಿಂದ ಲಾಠಿ ಪ್ರಹಾರ : ಮಾನವ ಹಕ್ಕು ಉಲ್ಲಂಘನೆ ತಡೆಗೆ ಆಗ್ರಹಿಸಿದ ವಕೀಲ