ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಇದ್ದ ಹಲವು ನಿರ್ಬಂಧಗಳಿಗೆ ಬ್ರೇಕ್ ಹಾಕಿರುವ ರಾಜ್ಯ ಸರ್ಕಾರ, ಶಿಕ್ಷಕರ ವರ್ಗಾವಣೆಗೆ ಕರಡು ನಿಯಮ ಪ್ರಕಟ ಮಾಡಿ ಆದೇಶ ಹೊರಡಿಸಿದೆ.
ಶಿಕ್ಷಕರ ವರ್ಗಾವಣೆ ತಿದ್ದುಪಡಿ ಕಾಯ್ದೆ 2022 ಸಂಬಂಧ ಶಿಕ್ಷಣ ಇಲಾಖೆ ಕರಡು ನಿಯಮಾವಳಿ ಪ್ರಕಟಗೊಳಿಸಿದ್ದು, ಕರಡು ನಿಯಮಾವಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ-2020ಕ್ಕೆ ತಿದ್ದುಪಡಿ ಮಾಡಿ, ಸಚಿವ ಸಂಪುಟ ಸಭೆ ಅನುಮೋದನೆ ಪಡೆಯಲಾಗಿತ್ತು. ನಂತರ ಅಧಿವೇಶನದಲ್ಲಿ ಮಂಡಿಸಲಾಗಿತ್ತು.
ಈಗ ಕರಡು ಅಧಿಸೂಚನೆ ಹೊರಡಿಸಲಾಗಿದ್ದು, ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಿದ ದಿನದಿಂದ 15 ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದೆ. ಪರಸ್ಪರ ವರ್ಗಾವಣೆಗೆ ಒಂದು ಬಾರಿ ಮಾತ್ರ ಅವಕಾಶ ಇತ್ತು. ಇನ್ನು ಮುಂದೆ ಆ ನಿರ್ಬಂಧ ಇರುವುದಿಲ್ಲ. ಕೆಲಸಕ್ಕೆ ಸೇರಿದ ಮೊದಲ ಐದು ವರ್ಷ ಹಾಗೂ ನಿವೃತ್ತಿಗೆ ಮೊದಲಿನ ಐದು ವರ್ಷ ವರ್ಗಾವಣೆಗೆ ಅವಕಾಶ ಇರುವುದಿಲ್ಲ. ಆದರೆ, ಒಮ್ಮೆ ವರ್ಗಾವಣೆಯಾದ ಬಳಿಕ ಮತ್ತೆ ಮೂರು ವರ್ಷ ಅರ್ಜಿ ಸಲ್ಲಿಸುವಂತಿಲ್ಲ.