ಬೆಂಗಳೂರು:ನವೆಂಬರ್ 18 ಮತ್ತು 19 ರಂದು ನಡೆಯಲಿರುವ ವಿವಿಧ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಸ್ತ್ರ ಸಂಹಿತೆ ಬಿಡುಗಡೆ ಮಾಡಿದ್ದು ಅದರಂತೆ ಮಹಿಳಾ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಕಾಲುಂಗುರ ಧರಿಸಲು ಅನುಮತಿಸಲಾಗಿದೆ.
ಇತ್ತೀಚೆಗೆ ನಡೆದ ಕೆಪಿಎಸ್ಸಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳಾಗಿದ್ದ ಗೃಹಿಣಿಯರ ಮಂಗಳಸೂತ್ರ ಹಾಗೂ ಕಾಲುಂಗುರ ತೆಗೆಸಿದ ಘಟನೆ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನವೆಂಬರ್ 18 ಮತ್ತು 19 ರಂದು ನಡೆಯಲಿರುವ ಪರೀಕ್ಷೆಗಳಿಗೆ ವಸ್ತ್ರ ಸಂಹಿತೆ ರೂಪಿಸಿದೆ. ಅದರಂತೆ ವಿವಾಹಿತ ಮಹಿಳೆಯರು ಮಾಂಗಲ್ಯ ಹಾಗೂ ಕಾಲುಂಗುರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯುವವರಿಗೆ ಈಗಾಗಲೇ ಮಾರ್ಗಸೂಚಿ ರೂಪಿಸಿದ್ದ ಹಿನ್ನೆಲೆಯಲ್ಲಿ ಈಗ ಮಂಗಳಸೂತ್ರ ಮತ್ತು ಕಾಲುಂಗುರ ಕುರಿತ ಸ್ಪಷ್ಟೀಕರಣದೊಂದಿಗೆ ಪರೀಕ್ಷಾ ವಿದ್ಯಾರ್ಥಿಗಳು ಅನುಸರಿಸಬೇಕಾದ ಸೂಚನೆಗಳನ್ನು ಬಿಡುಗಡೆ ಮಾಡಿದೆ.
ಪರುಷ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ:
- ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು.
- ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ/ ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
- ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ, ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು.
- ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ಸ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.
- ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ:
- ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
- ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು, ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
- ಎತ್ತರವಾದ ಹಿಮ್ಮಡಿಯ ಶೂಗಳು, ಚಪ್ಪಲಿಗಳು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
- ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ)