ಬೆಂಗಳೂರು:ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿಯೇ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಬಿಜೆಪಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.
ಅ. 28 ರಂದು ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಹಿರಿಯೂರು ಬಿಜೆಪಿ ಶಾಸಕಿಯಾಗಿರುವ ಪೂರ್ಣಿಮ ಶ್ರೀನಿವಾಸ್ ಅವರ ಪತಿ ಡಿ.ಟಿ.ಶ್ರೀನಿವಾಸ್ ಪಕ್ಷೇತರರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಶಾಂತಿನಗರದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು.