ಬೆಂಗಳೂರು: ಹೈಕೋರ್ಟ್‌ನಿಂದ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಹಿನ್ನೆಲೆ ಎಚ್ಚೆತ್ತುಕೊಂಡಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ.
ನ್ಯಾಯಾಂಗ ನಿಂದನೆ ನೋಟಿಸ್ಗೆ ಎಚ್ಚೆತ್ತ ಪೊಲೀಸ್ ಇಲಾಖೆಯಿಂದ ಸುತ್ತೋಲೆ - Judicial abuse notice from highcourt
ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಹಿನ್ನೆಲೆ ಎಫ್ಐಆರ್ ದಾಖಲಿಸಿಕೊಳ್ಳುವಾಗ ವ್ಯಾಪ್ತಿ ಪರಿಗಣಿಸದೆ ದೂರು ಸ್ವೀಕರಿಸುವಂತೆ ಪೊಲೀಸ್ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಎಫ್ಐಆರ್ ದಾಖಲಿಸಿಕೊಳ್ಳುವಾಗ ಠಾಣಾ ವ್ಯಾಪ್ತಿ ಪರಿಗಣಿಸದೆ ದೂರು ಸ್ವೀಕರಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಕಮಿಷನರೇಟ್ ಹಾಗೂ ವಲಯ ಪೊಲೀಸ್ ಮಹಾನಿರೀಕ್ಷರು, ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಈ ಸುತ್ತೋಲೆ ಹೊರಡಿಸಿದ್ದು, ಸಾರ್ವಜನಿಕರು ಯಾವುದೇ ಸಂದರ್ಭದಲ್ಲಿ ದೂರು ನೀಡಿದರೆ ಠಾಣಾ ವ್ಯಾಪ್ತಿಯನ್ನು ನೋಡದೆ ಅದೊಂದು ಪ್ರಕರಣ ಎಂದು ಪರಿಗಣಿಸಿ ಪ್ರಕರಣ ದಾಖಲಿಸಿಕೊಳ್ಳಬೇಕು. ಒಂದು ವೇಳೆ ಆದೇಶ ಉಲ್ಲಂಘನೆ ಮಾಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇತ್ತೀಚೆಗೆ ದಾಖಲಾಗಿದ್ದ ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಎರಡು ತಿಂಗಳ ಹಿಂದೆಯೇ ಈ ಕುರಿತು ಆದೇಶ ಹೊರಡಿಸುವಂತೆ ಸೂಚಿಸಿತ್ತು. ಆದರೂ ಇಲಾಖೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಸೋಮವಾರ ನ್ಯಾಯಾಂಗ ನಿಂದನೆ ಆರೋಪದಡಿ ನೋಟಿಸ್ ಜಾರಿ ಮಾಡಿತ್ತು. ಈ ಸಂಬಂಧ ಹೊಸ ಆದೇಶ ಹೊರಡಿಸಿ, ಇಲಾಖೆಯ ಎಲ್ಲಾ ವಿಭಾಗಗಳಿಗೆ ಕಳುಹಿಸಬೇಕು ಎಂದು ಕೋರ್ಟ್ ಸೂಚಿಸಿತ್ತು. ಹೀಗಾಗಿ ಹೊಸ ಆದೇಶವನ್ನು ಎಲ್ಲಾ ಕಮಿಷನರ್‌ಗಳು, ವಲಯ ಮಹಾನಿರೀಕ್ಷಕರು ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದು, ತಮ್ಮ ಅಧೀನ ಅಧಿಕಾರಿಗಳಿಗೆ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.