ಬೆಂಗಳೂರು :ಕೇವಲ ಅಂಬಾನಿ-ಅದಾನಿಯಂತಹ ವ್ಯವಹಾರಸ್ಥರಲ್ಲದೇ ತಿಮ್ಮ, ಬೋರ ಹಾಗೂ ಕಾಳನಂತಹ ಜನಸಾಮಾನ್ಯರ ಜೇಬಿನಲ್ಲಿ ಹಣವಿದ್ದಲ್ಲಿ ಆರ್ಥಿಕ ಸ್ಥಿತಿ ಬೆಳವಣಿಗೆ ಮತ್ತು ಮಧ್ಯಮ ವರ್ಗ ಅಭಿವೃದ್ಧಿಗೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ.ಡಾ. ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮ ಉದ್ಘಾಟನೆ ಹಾಗೂ ಸಿದ್ದಲಿಂಗಯ್ಯ ಪುತ್ಥಳಿ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ದುಡಿಯುವವರು, ಶ್ರಮಿಕರಲ್ಲಿ ಹಣವಿದ್ದರೆ ದೇಶದ ಆರ್ಥಿಕತೆಯ ಬೆಳವಣಿಗೆ ಆಗುತ್ತದೆ. ಆದರೆ, ಕೇವಲ ಅಂಬಾನಿ, ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡೀ ದೇಶ ಪರಿತಪಿಸುವಂತಾಗಿದೆ ಎಂದರು.
ದೇಶದ ಆರ್ಥಿಕ ಸ್ಥಿತಿ ಬೆಳೆಯಬೇಕೆಂಬ ಕಾರಣದಿಂದ ನಮ್ಮ ಸರ್ಕಾರ ಶ್ರಮಿಕ ವರ್ಗದ ಜೇಬಿಗೆ ಹಣ ಹಾಕುವ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಈ ಮೂಲಕ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದಾಗಿ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:ಗ್ರಾಮೀಣಾಭಿವೃದ್ಧಿ, ಪಂ.ರಾಜ್ ಇಲಾಖೆ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ಸಂವಿಧಾನ ವಿರೋಧಿಗಳಿಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ? ಅಂಬಾನಿ-ಅದಾನಿಯವರ ಜೇಬು ತುಂಬಿಸುವವರ ಕೈಗೆ ಕೇಂದ್ರದಲ್ಲಿ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಸಾಧ್ಯವೇ ಎಂದು ಇದೇ ವೇಳೆ ಪ್ರಶ್ನಿಸಿದರು.