ಕರ್ನಾಟಕ

karnataka

ETV Bharat / state

ಚುನಾವಣಾ ಅಕ್ರಮ ಆರೋಪ: ರಿಜ್ವಾನ್ ಅರ್ಷದ್​​​​ಗೆ ಹೈಕೋರ್ಟ್ ನೋಟಿಸ್ - ಬೆಂಗಳೂರು

High Court issues notice to Rizwan Arshad: ರಿಜ್ವಾನ್ ಅರ್ಷದ್ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಶಾಸಕರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ

Rizwan Arshad, Karnataka HC
ರಿಜ್ವಾನ್ ಅರ್ಷದ್​​​​, ಹೈಕೋರ್ಟ್

By ETV Bharat Karnataka Team

Published : Aug 30, 2023, 6:35 AM IST

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆ ಆಗಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ಸಂಬಂಧ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ ಸಂಬಂಧ ಸಂಪಂಗಿ ರಾಮನಗರದ ನಿವಾಸಿ ಬಿ.ಲಕ್ಷ್ಮೀ ದೇವಿ ಎಂಬುವವರು ಚುನಾವಣಾ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟಂಬರ್ 19ಕ್ಕೆ ಮುಂದೂಡಿದೆ.

ಕಾಂಗ್ರೆಸ್ ಪಕ್ಷ ಪ್ರಕಟಿಸಿದ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಅಭ್ಯರ್ಥಿಗಳ ಅವರ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವು ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿದೆ. ಆ ಮೂಲಕ ರಿಜ್ವಾನ್ ಅರ್ಷದ್ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ. ಮತದಾರರಿಗೆ ಆಮಿಷವೊಡುವುದು ಲಂಚ ಮತ್ತು ಭ್ರಷ್ಟಚಾರಕ್ಕೆ ಸಮವಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು.

ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿರುವುದು ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ಪ್ರಕಾರ ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123(4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧವಾಗಿದೆ. ಹಾಗಾಗಿ, ಶಿವಾಜಿನಗರ ಕ್ಷೇತ್ರದಿಂದ ರಿಜ್ವಾನ್ ಅರ್ಷದ್ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದರು.

ಸಿಎಂಗೆ ನೋಟಿಸ್ ಜಾರಿ ಮಾಡಿದ್ದ ಹೈಕೋರ್ಟ್: ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಕಳೆದ ಜು.28ರಂದು ಮುಖ್ಯಮಂತ್ರಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ಗ್ರಾಮದ ನಿವಾಸಿ ಕೆ.ಎಂ. ಶಂಕರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರಿದ್ದ ನ್ಯಾಯಪೀಠ, ನೋಟಿಸ್ ಜಾರಿ ಮಾಡಿ ಸೆಪ್ಟೆಂಬರ್​ 1ಕ್ಕೆ ವಿಚಾರಣೆ ಮುಂದೂಡಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಇದು ಲಂಚಕ್ಕೆ ಸಮವಾಗಿದ್ದು, ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ಪ್ರಕಾರ ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4) ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧವಾಗಿದೆ. ಹಾಗಾಗಿ, ಅಕ್ರಮಗಳನ್ನು ಎಸಗುವ ಮೂಲಕ ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು'' ಎಂದು ಕೋರಿದ್ದರು.

ಅಲ್ಲದೇ, ಕಾಂಗ್ರೆಸ್ ಪಕ್ಷ ಮತ್ತು ಅಭ್ಯರ್ಥಿ ಸಿದ್ದರಾಮಯ್ಯ ಅವರು ಪ್ರಕಟಿಸಿದ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವು ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿದೆ. ಆ ಮೂಲಕ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಅಕ್ರಮಗಳನ್ನು ಎಸಗಿದ್ದಾರೆ. ಮತದಾರರಿಗೆ ಆಮಿಷ ಒಡ್ಡುವುದು ಲಂಚ ಮತ್ತು ಭ್ರಷ್ಟಾಚಾರಕ್ಕೆ ಸಮಾನವಾಗಿದೆ. ಅಲ್ಲದೇ, ಪ್ರಜಾಪ್ರತಿನಿಧಿ ಕಾಯ್ದೆಯ ಅನ್ವಯ ಅಪರಾಧವಾಗಿದ್ದು, ಚುನಾವಣಾ ಮಾದರಿ ನೀತಿ ಸಂಹಿತೆ ಸ್ಪಷ್ಟ ಉಲ್ಲಂಘನೆಯೂ ಆಗಿದೆ. ಆದ್ದರಿಂದ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಅನರ್ಹತೆ ಕೋರಿ ಅರ್ಜಿ: ಸಿಎಂಗೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್

ABOUT THE AUTHOR

...view details