ಬೆಂಗಳೂರು :ನಗರದ ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಮತಗಟ್ಟೆಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಭೇಟಿ ನೀಡಿದ್ದಾರೆ. ಈ ವೇಳೆ ಮತಗಟ್ಟೆಗಳಲ್ಲಿ ಇರಬೇಕಿರುವ ಕನಿಷ್ಠ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್, ಪೀಠೋಪಕರಣಗಳು, ಕಾಯುವ ಕೊಠಡಿ, ಸಹಾಯ ಕೇಂದ್ರ, ಶೌಚಾಲಯ, ರ್ಯಾಂಪ್ ಸೌಲಭ್ಯಗಳ ಬಗ್ಗೆ ಪರಿಶೀಲಿಸಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಪೂರ್ವ ಸಿದ್ಧತೆಯ ಸಂಬಂಧ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮುಖ್ಯ ಆಯುಕ್ತರು ಲಾರೆನ್ಸ್ ಸ್ಕೂಲ್, ಅಗರ ಕರ್ನಾಟಕ ಪಬ್ಲಿಕ್ ಶಾಲೆ, ಸೋಮಸುಂದರ ಪಾಳ್ಯ ಸರ್ಕಾರಿ ಶಾಲೆ, ಹೊಂಗಸಂದ್ರ ವಿದ್ಯಾಜ್ಯೋತಿ ಶಾಲೆಯಲ್ಲಿ ಮತಗಟ್ಟೆಗಳ ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಎಲ್ಲಾ ಮತಗಟ್ಟೆಗಳಲ್ಲೂ ಕನಿಷ್ಟ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿ ಇರಬೇಕು. ಇಲ್ಲವಾದಲ್ಲಿ ಬೇರೆಡೆ ಮತಗಟ್ಟೆಗಳನ್ನು ಗುರುತಿಸಲು ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟರು.
ಹೆಚ್.ಎಸ್.ಆರ್ ಬಿಡಿಎ ಕಾಂಪ್ಲೆಕ್ಸ್ ಬಳಿ ಪಾದಚಾರಿ ಮಾರ್ಗವನ್ನು ಬೀದಿಬದಿ ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ತುಷಾರ್ ಗಿರಿನಾಥ್, ಪ್ರಮುಖ ರಸ್ತೆಗಳಲ್ಲಿ ಬೀದಿ ವ್ಯಾಪಾರಿಗಳು ಮಾರಾಟ ಮಾಡಲು ಅವಕಾಶ ನೀಡಬಾರದು. ಎಲ್ಲಾ ಬೀದಿ ವ್ಯಾಪಾರಿಗಳಿಗೆ ವಾರ್ಡ್ ರಸ್ತೆಗಳಲ್ಲಿ ವ್ಯಾಪಾರ ಮಾಡಲು ಸ್ಥಳಾವಕಾಶ ನೀಡಲು ಅಧಿಕಾರಿಗಳಿಗೆ ಹೇಳಿದರು. ಈ ವೇಳೆ ನಗರದಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವ ಡಾಂಬರು ರಸ್ತೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುವಂತೆ ಶೋಲ್ಡರ್ ಡ್ರೈನ್ ನಿರ್ಮಿಸಲು ತಿಳಿಸಿದರು.