ಬೆಂಗಳೂರು: ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವ ತಂತ್ರ ದುರ್ಬಳಕೆ ತಡೆ ಕಾಯ್ದೆಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಈ ಕುರಿತು ವಿಜಯಪುರದ ಮಕ್ಕಳ ತಜ್ಞ ಡಾ.ಸಾರ್ವಭೌಮ ಎಸ್. ಬಗಲಿ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವ ಕುರಿತು ಸುಪ್ರೀಂ ಕೋರ್ಟ್ 2016ರ ನವೆಂಬರ್ 8ರಂದು ಎಲ್ಲಾ ರಾಜ್ಯಗಳಿಗೆ ಆದೇಶಿಸಿತ್ತು. ಆದರೆ, ರಾಜ್ಯ ಸರ್ಕಾರ ಸುಪ್ರೀಂ ಆದೇಶವನ್ನು ಸಮರ್ಥವಾಗಿ ಪಾಲಿಸುತ್ತಿಲ್ಲ ಎಂದು ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸುಪ್ರೀಂಕೋರ್ಟ್ ಆದೇಶಾನುಸಾರ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವೆಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಸಮಗ್ರ ವರದಿಯನ್ನು ಸೆಪ್ಟೆಂಬರ್ 11ರೊಳಗೆ ಪ್ರಮಾಣ ಪತ್ರದ ಮೂಲಕ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಸೆ.15ಕ್ಕೆ ಮುಂದೂಡಿತು.