ಬೆಂಗಳೂರು :ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ಕಮಲ ಪಾಳಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಈ ಪರಿಸ್ಥಿತಿಯನ್ನು ತಕ್ಷಣವೇ ನಿಯಂತ್ರಿಸುವಂತೆ ಹೈಕಮಾಂಡ್ನಿಂದ ಸಂದೇಶ ಬಂದಿದ್ದು, ಪರಿಸ್ಥಿತಿ ಅವಲೋಕಿಸಲು ರಾಜ್ಯ ಬಿಜೆಪಿ ನಾಯಕರ ತುರ್ತು ಸಭೆಯನ್ನು ಕರೆಯಲಾಗಿದೆ.
ಇಂದು ಸಂಜೆ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ವಿಶೇಷ ಸಭೆ ಕರೆಯಲಾಗಿದ್ದು, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.
ಇದನ್ನೂ ಓದಿ :ರಾಜ್ಯದಲ್ಲಿ ಕಳೆದ 5 ವರ್ಷದಲ್ಲಿ ನಡೆದ ಚುನಾವಣೆ, ಉಪಚುನಾವಣೆ; ಗೆದ್ದವರ‍್ಯಾರು, ಸೋತವರ‍್ಯಾರು?
189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ ನಂತರ ಟಿಕೆಟ್ ಕೈತಪ್ಪಿದ ಹಾಲಿ ಶಾಸಕರು ಅಸಮಧಾನಗೊಂಡಿದ್ದಾರೆ. 23 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ನಂತರವೂ ಇದು ಮುಂದುವರೆದಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಾಜಿ ಸಚಿವರಾದ ಆರ್.ಶಂಕರ್, ಗೂಳಿಹಟ್ಟಿ ಶೇಖರ್, ಶಶಿಕಾಂತ್ ನಾಯಕ್, ಸೊಗಡು ಶಿವಣ್ಣ, ಹಾಲಿ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಶಾಸಕ ನೆಹರೂ ಓಲೇಕಾರ್ ಕೂಡ ರಾಜೀನಾಮೆಗೆ ಮುಂದಾಗಿದ್ದಾರೆ.