ಬೆಂಗಳೂರು: ಚಿಕ್ಕಮಗಳೂರು ನಗರದಲ್ಲಿ ಮುಂದಿನ ವರ್ಷದಿಂದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡದ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ ತೆಗೆದುಕೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ/ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಅವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿ, 2012ರಲ್ಲೇ ಚಿಕ್ಕಮಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಲು ತಿರ್ಮಾನಿಸಲಾಗಿತ್ತು. ಈ ಯೋಜನೆಗೆ 26 ಕೋಟಿ ರೂಪಾಯಿ ನೀಡುವಂತೆ ನಬಾರ್ಡ್ಗೂ ಮನವಿ ಸಲ್ಲಿಸಲಾಗಿತ್ತು. ನಂತರ ನಬಾರ್ಡ್ ಅನುಮೋದನೆ ನೀಡಿರಲಿಲ್ಲ. ಇದರ ನಂತರ ರೂಸಾ ಯೋಜನೆಯಡಿ ಹಣ ಮಂಜೂರು ಮಾಡುವಂತೆ ಪ್ರಸ್ತಾವ ಸಲ್ಲಿಸಿದಾಗಲೂ ಒಪ್ಪಿಗೆ ಸಿಕ್ಕಿರಲಿಲ್ಲ. ಇದನ್ನು ಸದ್ಯ 58 ಕೋಟಿ ರೂಪಾಯಿಗೆ ಪರಿಷ್ಕರಿಸಿದ್ದು, ಇದಕ್ಕೆ ಒಪ್ಪಿಗೆ ನೀಡಬೇಕು ಎಂದು ಸಚಿವ ರವಿ ಅವರು ಮನವಿ ಮಾಡಿದರು.
ಪ್ರಸಕ್ತ ಸಾಲಿನಲ್ಲಿ ಹಣದ ಕೊರತೆ ಇರುವ ಕಾರಣ ಮುಂದಿನ ವರ್ಷ ಕೈಗೆತ್ತಿಕೊಳ್ಳಲಾಗುವುದು. ಈ ನಡುವೆ ಕೇಂದ್ರ ಸರ್ಕಾರದಿಂದಲೂ ಅನುದಾನ ಪಡೆಯಲು ಪ್ರಯತ್ನಿಸಲಾಗುವುದು ಎಂದು ಡಿಸಿಎಂ ಹೇಳಿದರು.