ಕರ್ನಾಟಕ

karnataka

ETV Bharat / state

ರೈತರೇ ಸ್ವಂತ ಖರ್ಚಿನಲ್ಲಿ ಪಂಪ್​ಸೆಟ್‍ಗೆ ಅಗತ್ಯ ಸಲಕರಣೆ ಖರೀದಿ ಮಾಡಬೇಕೆಂಬ ಆದೇಶ: ಈರಣ್ಣ ಕಡಾಡಿ ಖಂಡನೆ

ಕೃಷಿ ಪಂಪಸೆಟ್‍ಗಳಿಗೆ ರೈತರೇ ಸ್ವಂತ ಖರ್ಚಿನಲ್ಲಿ ಹೊಸ ಸಂಪರ್ಕ ಪಡೆಯಬೇಕೆಂದು ಮಾಡಿರುವ ಆದೇಶವನ್ನು ಸರ್ಕಾರ ರದ್ದುಗೊಳಿಸಿಬೇಕು ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ಒತ್ತಾಯಿಸಿದ್ದಾರೆ.

eranna-kadadi-condemned-government-order-on-agriculture-pumpsets
ರೈತರೇ ಸ್ವಂತ ಖರ್ಚಿನಲ್ಲಿ ಪಂಪ್​ಸೆಟ್‍ಗೆ ಅಗತ್ಯ ಸಲಕರಣೆ ಖರೀದಿ ಮಾಡಬೇಕೆಂಬ ಆದೇಶ: ಈರಣ್ಣ ಕಡಾಡಿ ಖಂಡನೆ

By ETV Bharat Karnataka Team

Published : Nov 6, 2023, 10:40 PM IST

ಬೆಂಗಳೂರು: ಇನ್ನು ಮುಂದೆ ರೈತರ ಪಂಪ್ ಸೆಟ್‍ಗಳಿಗೆ ವಿದ್ಯುತ್ ಪಡೆಯಬೇಕಾದರೆ ಸ್ವಂತ ಖರ್ಚಿನಲ್ಲಿ ಟ್ರಾನ್ಸ್​ಫಾರ್ಮರ್, ಕಂಬ ಮತ್ತು ತಂತಿ ಸೇರಿದಂತೆ ವಿದ್ಯುತ್​ಗೆ ಸಂಬಂಧಪಟ್ಟ ವಸ್ತುಗಳನ್ನು ರೈತರೇ ಖರೀದಿಸಬೇಕೆಂದು ಸರ್ಕಾರ ಆದೇಶ ಮಾಡಿದ್ದು ಖಂಡನೀಯ. ಬರಗಾಲ, ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ನಿಂದ ಕಂಗಾಲಾದ ರೈತರ ಗಾಯದ ಮೇಲೆ ಬರೆ ಎಳೆದಂತಿದೆ. ಅಲ್ಲದೇ, ಇದು ಬಿಸಿ ಕಾವಲಿಯಲ್ಲಿದ್ದ ರೈತರನ್ನು ಸರ್ಕಾರ ಬೆಂಕಿಗೆ ದೂಡಿದಂತಾಗಿದೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ಅವರು ಕಿಡಿಕಾರಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ನೀಡಿದ ಅವರು, ಒಂದು ವೇಳೆ ಈ ಆದೇಶವನ್ನು ಹಿಂಪಡೆಯದಿದ್ದರೆ ರಾಜ್ಯದ ಸುಮಾರು 35 ಲಕ್ಷ ಪಂಪ್‍ಸೆಟ್‍ಗಳ ರೈತ ಬಳಕೆದಾರರೊಂದಿಗೆ ಬಿಜೆಪಿ ರೈತ ಮೋರ್ಚಾವು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ.
ಈ ಹಿಂದೆ ಪ್ರತಿ ನೀರಾವರಿ ಪಂಪ್‍ಸೆಟ್‍ಗಳಿಗೆ ಕೇವಲ 24 ಸಾವಿರ ರೂಪಾಯಿ ಶುಲ್ಕ ನಿಗದಿಯಾಗಿತ್ತು. ಸರ್ಕಾರದ ಈ ಆದೇಶದಿಂದ ಕನಿಷ್ಠ 2 ಲಕ್ಷ ರೂಪಾಯಿ ನೀಡಿ ವಿದ್ಯುತ್ ಸಂಪರ್ಕ ಪಡೆಯಬೇಕಾದ ಅನಿವಾರ್ಯತೆಗೆ ರೈತರನ್ನು ನೂಕಲಾಗಿದೆ. ಬರಗಾಲದಿಂದ ಕಂಗೆಟ್ಟಿರುವ ರೈತರು ಬದಲಿ ಮಾರ್ಗಗಳಿಲ್ಲದೇ ಹಲವೆಡೆ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ರೈತರ ಆತಂಕ ಹೆಚ್ಚಾಗಿದ್ದು, ಪರಿಣಾಮವಾಗಿ ರೈತರು ಮುಂದೇನು ಎಂದು ಯೋಚಿಸುವಂತಾಗಿದೆ ಎಂದಿದ್ದಾರೆ.

ಮಳೆಯ ಅಭಾವದಿಂದ ರಾಜ್ಯದಲ್ಲಿ ಸಂಪೂರ್ಣ ಬರಗಾಲ ಆವರಿಸಿದ್ದು, ಮುಂಗಾರು ಬೆಳೆ ಸಂಪೂರ್ಣ ಹಾಳಾಗಿ ಹೋಗಿದೆ. ಪ್ರಸ್ತುತ ಹಿಂಗಾರಿನಲ್ಲಿ ಕೂಡ ಮಳೆಯ ಅಭಾವದಿಂದಾಗಿ ರೈತನ ಬೆಳೆಗಳು ಸಂಪೂರ್ಣ ನಾಶವಾಗಿವೆ. ಸರ್ಕಾರದ ವರದಿಯ ಪ್ರಕಾರ ರಾಜ್ಯದಲ್ಲಿ 223 ತಾಲೂಕುಗಳು ಸಂಪೂರ್ಣ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ ಎಂದು ವಿವರಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಮಾರು 200 ಕ್ಕಿಂತಲೂ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ಇದು ದುರ್ದೈವದ ಮತ್ತು ಅತ್ಯಂತ ಕಳವಳಿಕಾರಿ ಸಂಗತಿಯಾಗಿದೆ. ರಾಜ್ಯದಲ್ಲಿ ಅಳಿದುಳಿದ ಬೆಳೆಗಳನ್ನು ಉಳಿಸಿಕೊಳ್ಳಲಿಕ್ಕೆ ರೈತರು ತೆರೆದ ಬಾವಿ, ಕೊಳವೆ ಬಾವಿಗಳ ಮೊರೆ ಹೊಗಿದ್ದಾರೆ. ಆದರೆ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ, ಜೊತೆಗೆ ಅನಿಯಮಿತ ಲೋಡ್ ಶೆಡ್ಡಿಂಗ್ ಹೊಡೆತಕ್ಕೆ ರೈತರು ಬಸವಳಿದು ಹೋಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಹಿಂದಿನ ರೈತ ಪರವಾದ ಯೋಜನೆಗಳಾದ ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ, ಭೂ ಚೇತನ, ಭೂ ಸಿರಿ, ರೈತ ಶಕ್ತಿ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸೇರಿದಂತೆ ಅನೇಕ ಯೋಜನೆಗಳನ್ನು ಅನುದಾನದ ಕೊರತೆ ಎಂಬ ನೆಪವೊಡ್ಡಿ ರದ್ದು ಮಾಡಲಾಗಿದೆ. ವಿದ್ಯುತ್ ಅಭಾವ, ರೈತರ ಆತ್ಮಹತ್ಯೆ ಹಾಗೂ ಬರ ಪೀಡಿತ ಪ್ರದೇಶದ ರೈತರ ಸಹಾಯಕ್ಕೆ ಬರಬೇಕಾದ ಸರ್ಕಾರ ಮತ್ತು ಉಸ್ತುವರಿ ಮಂತ್ರಿಗಳು ಯಾವುದೇ ಜಿಲ್ಲೆಗಳಿಗೆ ಭೇಟಿ ನೀಡಿಲ್ಲ. ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ ಎಂದು ಆಕ್ಷೇಪಿಸಿದ್ದಾರೆ.

ಹೀಗಾಗಿ ರೈತನ ಬದುಕು ಅತ್ಯಂತ ಅಸಹನಿಯವಾಗಿದೆ. ರೈತರ ಕೃಷಿ ಪಂಪಸೆಟ್‍ಗಳಿಗೆ ಸ್ವಂತ ಖರ್ಚಿನಲ್ಲಿಯೇ ಹೊಸ ಸಂಪರ್ಕ ಪಡೆಯುವ ಆದೇಶವನ್ನು ಸರ್ಕಾರ ರದ್ದುಗೊಳಿಸಿ, ಈ ಹಿಂದಿನಂತೆಯೇ ವಿದ್ಯುತ್ ಸಂಪರ್ಕ ನೀಡಬೇಕಾಗಿ ಸರ್ಕಾರವನ್ನು ಕರ್ನಾಟಕ ಬಿಜೆಪಿ ರೈತ ಮೋರ್ಚಾ ಒತ್ತಾಯಿಸುತ್ತದೆ. ಸರ್ಕಾರ ತನ್ನ ಈ ಆದೇಶವನ್ನು ಹಿಂಪಡೆಯದಿದ್ದರೆ ರೈತ ಬಳಕೆದಾರರೊಂದಿಗೆ ಬಿಜೆಪಿ ರೈತ ಮೋರ್ಚಾವು ಎಲ್ಲಾ ಜಿಲ್ಲಾ ಕೇಂದ್ರ ಹಾಗೂ ಮಂಡಲಗಳಲ್ಲಿ ನ.10 ರಂದು ಬೀದಿಗಿಳಿದು ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ಇಲ್ಲಿ ಬರ ಅಧ್ಯಯನ ಮಾಡುವುದಲ್ಲ, ಕೇಂದ್ರದಿಂದ ಹಣ ಬಿಡುಗಡೆ ಮಾಡಿಸಲಿ: ಸಚಿವ ಚೆಲುವರಾಯ ಸ್ವಾಮಿ

ABOUT THE AUTHOR

...view details