ಕರ್ನಾಟಕ

karnataka

ETV Bharat / state

ಏಪ್ರಿಲ್ 24 ರಿಂದ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ: 73 ಸಾವಿರ ಶಿಕ್ಷಕರ ಬಳಕೆ..!

50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದ್ದು, ಶೀಘ್ರದಲ್ಲೇ ಫಲಿತಾಂಶ ಪ್ರಕಟ ದಿನಾಂಕವನ್ನೂ ಘೋಷಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

Secondary Education Examination Board
ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ

By

Published : Apr 17, 2023, 6:59 PM IST

ಬೆಂಗಳೂರು: ಏಪ್ರಿಲ್ 24 ರಿಂದ ಎಸ್​ಎಸ್ಎಲ್​ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭಗೊಳ್ಳಲಿದ್ದು, ಮೌಲ್ಯಮಾಪನ ಕಾರ್ಯಕ್ಕಾಗಿ 73 ಸಾವಿರ ಶಿಕ್ಷಕರ ನಿಯೋಜನೆ ಮಾಡಲಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ ಬೇಕಾದ ಎಲ್ಲ ಸಿದ್ಧತೆ ನಡೆದಿದೆ ಎಂದು ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಎಸ್​​ಎಸ್​​ಎಲ್​ಸಿ ಪರೀಕ್ಷೆ ನಡೆದಿದ್ದು, ಏಪ್ರಿಲ್ 24 ರಿಂದ ಮೌಲ್ಯಮಾಪನ ಕಾರ್ಯ ಆರಂಭಗೊಳ್ಳಲಿದೆ. ರಾಜ್ಯಾದ್ಯಂತ 236 ಕೇಂದ್ರಗಳಲ್ಲಿ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಇದಕ್ಕಾಗಿ 73 ಸಾವಿರಕ್ಕೂ ಹೆಚ್ಚಿನ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ಅಗತ್ಯ ಶಿಕ್ಷಕರ ನಿಯೋಜನೆ ಕಾರ್ಯ ನಡೆಯುತ್ತಿದ್ದು, ಮೌಲ್ಯಮಾಪನ ಕಾರ್ಯ ಆರಂಭಗೊಂಡ ನಂತರ ಫಲಿತಾಂಶ ಪ್ರಕಟಿಸುವ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ಮಂಡಳಿ ಮಾಹಿತಿ ನೀಡಿದೆ.

ಇದನ್ನು ಓದಿ:ದ್ವಿತೀಯ ಪಿಯುಸಿ ಮೌಲ್ಯಮಾಪನಕ್ಕೆ 6 ಸಾವಿರ ಉಪನ್ಯಾಸಕರು ಗೈರು: ಕ್ರಮದ ಎಚ್ಚರಿಕೆ

ರಾಜ್ಯದಲ್ಲಿ ಚುನಾವಣಾ ಕಾರ್ಯ ಆರಂಭಗೊಂಡಿದ್ದು, ಮೇ 10 ರಂದು ಮತದಾನ ನಡೆಯಲಿದೆ. ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಚುನಾವಣಾ ಕಾರ್ಯಕ್ಕೂ ಶಿಕ್ಷಕರ ನಿಯೋಜನೆ ನಡೆದಿದ್ದು, ಮೌಲ್ಯಮಾಪನ ಕಾರ್ಯಕ್ಕೆ ತೊಂದರೆಯಾಗದಂತೆ ಅಗತ್ಯ ಶಿಕ್ಷಕರನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ ಎಂದು ಮಂಡಳಿ ತಿಳಿಸಿದೆ.

ಕಲಬುರಗಿ ಮತ್ತು ಬೆಳಗಾವಿಯಲ್ಲಿ ಪರೀಕ್ಷಾ ಅಕ್ರಮ ನಡೆದ ಘಟನೆಗಳ ಹೊರತುಪಡಿಸಿ ಇಡೀ ರಾಜ್ಯದಲ್ಲಿ ಪರೀಕ್ಷೆ ಶಾಂತಿಯುತವಾಗಿ ನಡೆದಿದೆ. ಈ ಬಾರಿಯ ಎಸ್​ಎಸ್ಎಲ್​​ಸಿ ಪರೀಕ್ಷೆಗೆ ಒಟ್ಟು 15,498 ಶಾಲೆಗಳಿಂದ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 5,833 ಸರ್ಕಾರಿ ಶಾಲೆಗಳು, 3,605 ಅನುದಾನಿತ ಶಾಲೆಗಳು ಹಾಗು 6,060 ಅನುದಾನಿರಹಿತ ಶಾಲೆಗಳಿಂದ ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 7,94,611 ವಿದ್ಯಾರ್ಥಿಗಳು ಮೊದಲ ಬಾರಿ ಪರೀಕ್ಷೆ ಬರೆಯುವ ಶಾಲಾ ವಿದ್ಯಾರ್ಥಿಗಳಾಗಿದ್ದು, 20,750 ಪುನರಾವರ್ತಿತ ವಿದ್ಯಾರ್ಥಿಗಳು, 18,272 ಖಾಸಗಿ ಅಭ್ಯರ್ಥಿಗಳು, 8,862 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು, 2010ಕ್ಕಿಂತ ಹಿಂದಿನ ಸಾಲಿನ 301 ಪುನರಾವರ್ತಿತ ಅಭ್ಯರ್ಥಿಗಳು, 2010ಕ್ಕಿಂತ ಹಿಂದಿನ ಸಾಲಿನ 15 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಇದ್ದರು.

1,845 ಕ್ಲಸ್ಟರ್ ಪರೀಕ್ಷಾ ಕೇಂದ್ರ, 1,354 ನಾನ್ ಕ್ಲಸ್ಟರ್ ಪರೀಕ್ಷಾ ಕೇಂದ್ರಗಳು, 106 ಖಾಸಗಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, 3,60,862 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು, 2,20,831 ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು, 2,61,118 ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 3,305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು.

ಇದನ್ನೂ ಓದಿ:ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶೇ. 10 ಕೃಪಾಂಕ ಮುಂದುವರಿಕೆಗೆ ನಿರ್ಧಾರ

ABOUT THE AUTHOR

...view details