ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆಯುಕ್ತ ಎನ್.ಮಂಜುನಾಥ್ ಪ್ರಸಾದ್, ಪಾಲಿಕೆಯ ವಿಶೇಷ ಆಯುಕ್ತರು ಹಾಗೂ 300ಕ್ಕೂ ಹೆಚ್ಚು ಅಧಿಕಾರಿಗಳ ಜೊತೆ ಆನ್ಲೈನ್ ಮೂಲಕ ಸಭೆ ನಡೆಸಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಹೆಚ್ಚಾಗದಂತೆ ತಡೆಯಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.
ನಗರದಲ್ಲಿ ಇತ್ತೀಚಿನ ಅಂಕಿ-ಅಂಶಗಳನ್ನು ನೋಡಿದಾಗ ಕೋವಿಡ್ ಪ್ರಕರಣಗಳು ದಿನೇ ದಿನೆ ಹೆಚ್ಚಳವಾಗುತ್ತಿವೆ. ಸಮಾರಂಭಗಳು, ಕಾರ್ಯಕ್ರಮಗಳು, ಆರ್ಥಿಕ ಚಟುವಟಿಕೆಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡದಿರುವುದರಿಂದ ಕೋವಿಡ್ ಪ್ರಕರಣಗಳು ಹೆಚ್ಚಳಗೊಂಡಿವೆ. ಮಾರ್ಚ್ ತಿಂಗಳಲ್ಲಿ 300ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ನಿನ್ನೆ 478 ಪ್ರಕರಣಗಳು ಪತ್ತೆಯಾಗಿವೆ ಎಂದರು.
ಸಮರ್ಪಕ ವಿಳಾಸ ಪಡೆಯಿರಿ
ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಇನ್ನಿತರೆ ಆಸ್ಪೆತ್ರೆಗಳಲ್ಲಿ ಸ್ವ್ಯಾಬ್ ಕಲೆಕ್ಟರ್ಸ್ ಸ್ವ್ಯಾಬ್ ನೀಡಲು ಬಂದವರ ಬಳಿ ಸರಿಯಾದ ಮೊಬೈಲ್ ಸಂಖ್ಯೆ, ವಿಳಾಸ ಮತ್ತು ಪಿನ್ ಕೋಡ್ ಪಡೆಯಬೇಕು. ಸ್ವ್ಯಾಬ್ ನೀಡಲು ಬಂದವರಿಂದ ಸರಿಯಾದ ಮೊಬೈಲ್ ಸಂಖ್ಯೆ ಪಡೆದು ಆ ಮೊಬೈಲ್‌ಗೆ ಬಂದಿರುವ ಒಟಿಪಿ ಪರಿಶೀಲಿಸಿ ಸಮರ್ಪಕ ವಿಳಾಸ ಪಡೆಯಬೇಕು. ಇದರಿಂದ ಸೋಂಕಿತ ವ್ಯಕ್ತಿಗಳನ್ನು ತ್ವರಿತವಾಗಿ ಪತ್ತೆ ಹಚ್ಚಲು ಸಾಧ್ಯವಾಗುತ್ತದೆ ಎಂದಿದ್ದಾರೆ.
ಕೋವಿಡ್ ಪರೀಕ್ಷೆ ಹೆಚ್ಚಳ ಮಾಡಲು ಸೂಚನೆ
ನಗರದಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಳ ಮಾಡಬೇಕು. ಈ ನಿಟ್ಟಿನಲ್ಲಿ 141 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೊಬೈಲ್ ಟೆಸ್ಟಿಂಗ್ ತಂಡಗಳು ಸೇರಿದಂತೆ ಸುಮಾರು 500 ತಂಡಗಳಿದ್ದು, ಇರುವ ಸಿಬ್ಬಂದಿಯನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಮಾಡಬೇಕು. ಅಲ್ಲದೆ ಖಾಸಗಿ ಕ್ಲಿನಿಕ್ಗಳಲ್ಲಿಯೂ ಸ್ವ್ಯಾಬ್ ಸಂಗ್ರಹಿಸಲು ಕ್ರಮ ವಹಿಸಬೇಕು ಎಂದರು. ಐಎಲ್ಐ, SARI ಹಾಗೂ ರೋಗ ಲಕ್ಷಣಗಳಿರುವವರಿಗೆ ಕೋವಿಡ್ ಪರೀಕ್ಷೆ ಮಾಡಬೇಕು ಎಂದು ಸೂಚಿಸಿದರು.
ಜನಸಂದಣಿಯಾಗುವ ಕಡೆ ಮಾರ್ಷಲ್ಗಳ ನಿಯೋಜನೆ
ನಗರದಲ್ಲಿ ಕೋವಿಡ್ ನಿಯಮಗಳು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಈ ನಿಟ್ಟಿನಲ್ಲಿ ಮುಂದಿನ ಎರಡು ತಿಂಗಳುಗಳ ಕಾಲ ಮಾರ್ಷಲ್‌ಗಳು ಇನ್ನೂ ಹೆಚ್ಚಾಗಿ ಕೆಲಸ ಮಾಡಬೇಕು. ಚಿತ್ರಮಂದಿರ, ಮಾರುಕಟ್ಟೆ, ಮದುವೆ, ಮಾಲ್, ರೆಸ್ಟೋರೆಂಟ್ ಸೇರಿದಂತೆ ಹೆಚ್ಚು ಜನ ಸೇರುವ ಸ್ಥಳಗಳ ಕಡೆ ಮಾರ್ಷಲ್‌ಗಳನ್ನು ನಿಯೋಜನೆ ಮಾಡಿ ಕೋವಿಡ್ ನಿಯಮಗಳನ್ನು ತಪ್ಪದೆ ಪಾಲನೆ ಮಾಡಲು ಸೂಚನೆ ನೀಡಬೇಕು. ಕೋವಿಡ್ ನಿಯಮಗಳನ್ನು ಪಾಲನೆ ಮಾಡದಿದ್ದರೆ ನಿಯಮಾನುಸಾರ ದಂಡ ವಿಧಿಸಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವ ಬಗ್ಗೆ ಆಟೋಗಳಲ್ಲಿ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.