ಬೆಂಗಳೂರು: ಮೇ 1 ರಂದು 18 ರಿಂದ 44 ವಯೋಮಾನದವರಿಗೆ ಕೋವಿಡ್ ಲಸಿಕೆ ಹಾಕುವ ಅಭಿಯಾನ ಆರಂಭವಾಗಿದೆ. ಆದರೆ, ರಾಜ್ಯದಲ್ಲಿ ಇದುವರೆಗೆ ಕೇವಲ 3 ಸಾವಿರದಷ್ಟು ಮಂದಿಗೆ ಮಾತ್ರ ಲಸಿಕೆ ಹಾಕಲಾಗಿದೆ.
ದೇಶದಲ್ಲಿ ಮಂಗಳವಾರದ ಹೊತ್ತಿಗೆ 6 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ ಗುಜರಾತ್‌ನಲ್ಲಿ 1,61 ಸಾವಿರ ಜನರಿಗೆ ಲಸಿಕೆ ಹಾಕಲಾಗಿದ್ದರೆ, ಕರ್ನಾಟಕದಲ್ಲಿ ಕೇವಲ 3.475 ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ. ಇದು ಕೇಂದ್ರದ ತಾರತಮ್ಯವೋ, ರಾಜ್ಯದ ವೈಫಲ್ಯವೋ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್ಡಿಕೆ, ಕರ್ನಾಟಕ ಮತ್ತು ಕನ್ನಡಿಗರಿಗೆ ತಾರತಮ್ಯವಾಗುತ್ತಿರುವುದು, ಗುಜರಾತ್ ಮೇಲೆ ಅತಿಯಾದ ಪ್ರೀತಿ ತೋರುತ್ತಿರುವುದು ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳಿಂದಲೇ ಬಹಿರಂಗವಾಗಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲೂ ಕೇಂದ್ರದಿಂದ ಆಗುತ್ತಿರುವ ಈ ತಾರತಮ್ಯ ಮನುಷ್ಯತ್ವ ವಿರೋಧಿ. ಕನ್ನಡಿಗರಿಗಾಗಿ ಸೊಲ್ಲೆತ್ತದ ರಾಜ್ಯ ಸರ್ಕಾರದ ಪರಮ ವೈಫಲ್ಯ ಎಂದು ಹೇಳಿದ್ದಾರೆ.