ಬೆಂಗಳೂರು:ಭೂ ಸುಧಾರಣೆ ತಿದ್ದು ಕಾಯ್ದೆ ಸೇರಿದಂತೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ರೈತ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ಸುಗ್ರೀವಾಜ್ಞೆ ವಾಪಸ್ ಪಡೆದ್ರೆ ಮಾತ್ರ ಪ್ರತಿಭಟನೆ ಕೈಬಿಡ್ತೇವೆ: ಕುರುಬೂರು ಶಾಂತಕುಮಾರ್ - Farmers protest against farm bill Amaindment
ಸುಗ್ರೀವಾಜ್ಞೆ ಮೂಲಕ ವಿವಿಧ ಕಾಯ್ದೆಗಳಿಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ಬಾರ್ ಕೋಲಿನಿಂದ ನೆಲಕ್ಕೆ ಹೊಡೆದು ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಇಂದು ರಾಜ್ಯದೆಲ್ಲೆಡೆ ರಸ್ತೆ ತಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಂಗಳೂರಿನ ಎಲ್ಲಾ ಕಡೆಗಳಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆ ಮಾಡಿದ್ದೇವೆ. ರೈತರಿಗೆ ಮಾರಕವಾದ ತಿದ್ದುಪಡಿ ಸುಗ್ರೀವಾಜ್ಞೆ ಆದೇಶಗಳನ್ನು ವಾಪಸ್ ಪಡೆಯುವವರೆಗೂ ಹೋರಾಟ ಮುಂದುವರೆಸುತ್ತೇವೆ. ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನ ರೈತ ಮುಖಂಡರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸುಗ್ರೀವಾಜ್ಞೆ ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟವಾಗಿ ಹೇಳಿದರೆ ಕರ್ನಾಟಕ ಬಂದ್ ಕರೆ ಹಿಂಪಡೆಯಲಾಗುವುದು ಎಂದರು.