ಬೆಂಗಳೂರು : ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್- ಬಿಜೆಪಿ ಮಧ್ಯೆ ನೇರಾ ಹಣಾಹಣಿ ಇದ್ದರೆ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಲೆಕ್ಕಾಚಾರವೇ ಬೇರೆ. ಬೆಳಗಾವಿ ಹಾಗೂ ಮಸ್ಕಿ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿದಿಲ್ಲ. ಇದರ ಲಾಭ ಹೆಚ್ಚು ಬಿಜೆಪಿಗೆ.
ಬೆಳಗಾವಿ ಲೋಕಸಭೆ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 17 ರಂದು ಉಪಚುನಾವಣೆ ನಡೆಯಲಿದ್ದು, ಇಂದು ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅನುಕಂಪ, ಜಾತಿ ಸಮೀಕರಣ ಹಾಗೂ ಭಾಷಾಭಿಮಾನ ಮುನ್ನೆಲೆಗೆ ಬಂದಿದೆ. ಬಿಜೆಪಿ ಭದ್ರಕೋಟೆಯಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಅವರು ಕಣದಲ್ಲಿದ್ದು, ಅನುಕಂಪದ ಲಾಭದ ನಿರೀಕ್ಷೆಯ ಜೊತೆಗೆ ಲಿಂಗಾಯತ ಮತ್ತು ಮರಾಠಿ ಮತಗಳನ್ನು ಗಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ.
ಅದರ ಜೊತೆಗೆ ಪರಿಶಿಷ್ಟ ಸಮುದಾಯ ಹಾಗೂ ಹಿಂದುಳಿದ ಮತಗಳನ್ನು ಸೆಳೆಯಲು ಕಸರತ್ತು ನಡೆದಿದೆ. ಜೆಡಿಎಸ್ ಮತಗಳು ತಮಗೆ ಬರಲಿವೆ ಎಂಬ ಆತ್ಮ ವಿಶ್ವಾಸದಲ್ಲಿ ಬಿಜೆಪಿ ಇದೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ತಮ್ಮ ವೈಯಕ್ತಿಕ ರಾಜಕೀಯ ತಂತ್ರಗಾರಿಕೆ ಮೂಲಕ ಬಿಜೆಪಿ ಬೆನ್ನಿಗೆ ನಿಂತಿರುವ ಮರಾಠಿ, ಲಿಂಗಾಯತ, ಅಲ್ಪಸಂಖ್ಯಾತ ಸಮುದಾಯ ಮತಗಳನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ತನ್ನದೇ ಆದ ತಂತ್ರಗಾರಿಕೆ ಮೂಲಕ ಜೆಡಿಎಸ್ ಮತಗಳನ್ನು ಸೆಳೆಯಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಿದೆ. ಇಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನೇರಾ ಹಣಾಹಣಿ ಇದೆ.
ಮಸ್ಕಿ : ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ - ಕಾಂಗ್ರೆಸ್ ನಡುವೆ ಸಮಬಲದ ಹೋರಾಟ ನಡೆಯುತ್ತಿದೆ. ಇಲ್ಲೂ ಸಹ ಜೆಡಿಎಸ್ ಅಭ್ಯರ್ಥಿ ಕಣದಲ್ಲಿ ಇಲ್ಲದ ಕಾರಣ, ಬಿಜೆಪಿ - ಕಾಂಗ್ರೆಸ್ ಸಮಬಲವಿದೆ. ಆರಂಭದಲ್ಲಿ ಬಿಜೆಪಿ ಅಭ್ಯರ್ಥಿ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಇತ್ತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಂದು ಹೋದ ನಂತರ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರು ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಸಿಎಂ ಪುತ್ರ ವಿಜಯೇಂದ್ರ, ಈ ಕ್ಷೇತ್ರದಲ್ಲಿ ತಮ್ಮದೇ ಆದ ತಂತ್ರಗಾರಿಕೆ ನಡೆಸಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ್ ಕೂಡ ಪ್ರಬಲರಾಗಿದ್ದು, ಪ್ರತಿ ತಂತ್ರ ಹೆಣೆದಿದ್ದಾರೆ. ಇಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸದಿರುವುದು ಕಾಂಗ್ರೆಸ್ ಗೆ ಪ್ಲಸ್ ಆಗಲಿದೆ ಎಂಬ ಮಾತುಗಳು ಕೇಳಿ ಬಂದಿವೆ.