ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಗಳಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಸರ್ವಾನುಮತದಿಂದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವುದು ಕಗ್ಗಂಟಾಗಿ ಪರಿಣಮಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರುಗಳು ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಆಗಲು ಪಟ್ಟು ಹಿಡಿದಿದ್ದಾರೆ. ಇವರಿಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡುವುದು ಕಾಂಗ್ರೆಸ್ ಪಕ್ಷಕ್ಕೆ ಜಟಿಲವಾಗಿದೆ.
ಮುಖ್ಯಮಂತ್ರಿ ಅಭ್ಯರ್ಥಿಯನ್ನು ಶಾಸಕರ ಅಭಿಪ್ರಾಯ ಆಧರಿಸಿ ಆಯ್ಕೆ ಮಾಡಬೇಕು. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವೋಟಿಂಗ್ ಮೂಲಕ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ನಡೆಸಬೇಕು. ಹೆಚ್ಚಿನ ಶಾಸಕರ ಮತ ಪಡೆದವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಅಂತಿಮಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಪಷ್ಟ ನಿಲುವನ್ನು ಹೈಕಮಾಂಡ್ ಪ್ರತಿನಿಧಿಗಳಾಗಿ ಆಗಮಿಸಿದ ವೀಕ್ಷಕರ ಬಳಿ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.
ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶಾಸಕರ ವೋಟಿಂಗ್ ಮೂಲಕ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವುದಕ್ಕೆ ಒಲವು ಹೊಂದಿಲ್ಲವೆಂದು ಹೇಳಲಾಗಿದೆ. ಸಿಎಂ ಆಯ್ಕೆ ಅಧಿಕಾರವನ್ನು ಕಾಂಗ್ರೆಸ್ ಹೈಕಮಾಂಡ್ಗೆ ನೀಡಬೇಕೆನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕೆನ್ನುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಪಕ್ಷದ ಇಬ್ಬರು ಹಿರಿಯ ಮುಖಂಡರು ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಸಂಬಂಧ ತಮ್ಮ ವಿಭಿನ್ನ ನಿಲುವು ವ್ಯಕ್ತಪಡಿಸಿದ್ದರಿಂದ ಸರ್ವಾನುಮತದಿಂದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವುದು ಕಾಂಗ್ರೆಸ್ ಹೈಕಮಾಂಡ್ಗೆ ಒಂದು ರೀತಿಯಲ್ಲಿ ಸವಾಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕುರಿತಂತೆ ಸಮಾಲೋಚನೆ ನಡೆಸಲು ಹಾಗೂ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಹೈಕಮಾಂಡ್ ವೀಕ್ಷಕರನ್ನಾಗಿ ಪಕ್ಷದ ಹಿರಿಯ ಮುಖಂಡ ಸುಶೀಲ್ ಕುಮಾರ್ ಶಿಂಧೆ ಸೇರಿದಂತೆ ಮೂವರ ತಂಡವನ್ನು ಅವರನ್ನು ಕರ್ನಾಟಕಕ್ಕೆ ಕಳಿಸಿದ್ದು ಅವರು ತಮ್ಮ ವರದಿ ನೀಡಲಿದ್ದಾರೆ.