ಬೆಂಗಳೂರು: ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರದರ್ಶಿಸಿದ ನಾಟಕದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಆರೋಪ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಧುಸೂದನ್ ನೀಡಿದ ದೂರಿನ ಮೇರೆಗೆ ಕಾಲೇಜಿನ ಪ್ರಾಂಶುಪಾಲರು, ವಿದ್ಯಾರ್ಥಿಗಳು ಮತ್ತಿತರರ ವಿರುದ್ಧ ಜಾತಿನಿಂದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಫೆಬ್ರವರಿ 8ರಂದು ನಿಮ್ಹಾನ್ಸ್ ಕನ್ ವೆಂಕ್ಷನ್ ಸೆಂಟರ್ ನಲ್ಲಿ ಜೈನ್ ವಿವಿಯಿಂದ ಹಮ್ಮಿಕೊಂಡಿದ್ದ ಫೆಸ್ಟ್ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವಮಾನಿಸುವ ರೀತಿಯಲ್ಲಿ ನಾಟಕ ಪ್ರದರ್ಶನ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ. ಜೊತೆಗೆ ಇದರ ಸಂಭಾಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಸಂಬಂಧ ಕಾಲೇಜಿನ ವಿರುದ್ಧ ದಲಿತ ಸಂಘಟನೆಗಳಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಅಲ್ಲದೇ, ದಲಿತ ಸಂಘಟನೆಗಳ ಮುಖಂಡರು ಪೊಲೀಸರಿಗೆ ದೂರು ನೀಡಿದ್ದರು. ಜೊತೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕೂಡ ಪೊಲೀಸರಿಗೆ ದೂರು ಕೊಟ್ಟಿದ್ದರು. ಹೀಗಾಗಿ ಅಧಿಕಾರಿಯ ದೂರಿನ ಮೇರೆಗೆ ಪ್ರಾಂಶುಪಾಲರು, ನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳ ಮತ್ತು ಇತರರ ವಿರುದ್ಧ 20ಕ್ಕೂ ಹೆಚ್ಚು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.