ಬೆಂಗಳೂರು:ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ ಮೂರಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸೋಮವಾರ ತಡರಾತ್ರಿ 11.45ರ ಸುಮಾರಿಗೆ ಘಟನೆ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಕಟ್ಟಡದಲ್ಲಿದ್ದ ಬಟ್ಟೆ ಅಂಗಡಿ ಸುಟ್ಟು ಕರಕಲಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಕಟ್ಟಡದ ಮುಂದೆ ಇದ್ದ ತೆಂಗಿನ ಮರ, ಅಂಗಡಿ ಪಕ್ಕದಲ್ಲಿದ್ದ ಟ್ರಾನ್ಸ್ಫಾರ್ಮರ್ ಕೂಡ ಬೆಂಕಿಗಾಹುತಿ ಆಗಿವೆ. ಅಷ್ಟೇ ಅಲ್ಲದೇ ಪಕ್ಕದ ಕಟ್ಟಡಕ್ಕೂ ಬೆಂಕಿ ಆವರಿಸಿ ಮೂರ್ನಾಲ್ಕು ಅಂಗಡಿಗೂ ತಗುಲಿದೆ.
ಬೆಂಕಿ ಅವಘಡಕ್ಕೆ ಸೂಕ್ತ ಕಾರಣ ತಿಳಿದುಬಂದಿಲ್ಲ. ಅಂಗಡಿ ಪಕ್ಕದಲ್ಲೇ ಇದ್ದ ಟ್ರಾನ್ಸ್ಫಾರ್ಮರ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಹೊತ್ತಿಕೊಂಡ ವೇಳೆ ಈ ನಾಲ್ವರು ಕಟ್ಟಡದಲ್ಲಿದ್ದರು. ಕೂಡಲೇ ಇದನ್ನು ಗಮನಿಸದ ಮೂವರು ಪಕ್ಕದ ಕಟ್ಟಡಕ್ಕೆ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಇನ್ನೋರ್ವನನ್ನು ಕಟ್ಟಡಕ್ಕೆ ಏಣಿ ಹಾಕಿ ಕೆಳಕ್ಕೆ ಇಳಿಸಿಕೊಳ್ಳಲಾಗಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಐದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಈ ವೇಳೆ ಓರ್ವ ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ. ಸುಮಾರು ಎರಡೂವರೆ ಗಂಟೆ ನಿರಂತರ ಕಾರ್ಯಾಚರಣೆ ಬಳಿಕ ಬೆಂಕಿ ಹತೋಟಿಗೆ ಬಂದಿದೆ. ಅಂಗಡಿಯಲ್ಲಿದ್ದ ಬಟ್ಟೆ ಸುಟ್ಟು ಕರಕಲಾಗಿದೆ ಎಂದು ಅಗ್ನಿ ಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.