ಬೆಂಗಳೂರು:ಪರಿಸರ ಹಾಗೂ ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಎಲ್ಲಾ ಬಗೆಯ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ಮುಂದಿನ 3 ತಿಂಗಳೊಳಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ರಾಜ್ಯದಲ್ಲಿ ಪಟಾಕಿ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕೋರಿ ನಗರದ ಚಾರ್ಟರ್ಡ್ ಅಕೌಂಟೆಂಟ್ ಡಾ. ಎ.ಎಸ್.ಭರತ್ ವಿಷ್ಣು ಹಾಗೂ ಸಮರ್ಪಣ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಾದ ಪ್ರತಿವಾದ ಆಲಿಸಿದ ಪೀಠ, ಪರಿಸರ ಹಾಗೂ ಜನರ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಟಾಕಿ ನಿಷೇಧಿಸಬಹುದೇ ಎಂಬ ಕುರಿತು ಸರ್ಕಾರ ಮುಂದಿನ 3 ತಿಂಗಳೊಳಗೆ ತೀರ್ಮಾನ ಕೈಗೊಳ್ಳಬೇಕು ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.
ಹೈಕೋರ್ಟ್ ನಿರ್ದೇಶನ:ಹಬ್ಬಗಳು, ಸಮಾರಂಭಗಳು, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಸಿಡಿಸುವ ಮೂಲಕ ಜನ ತಮ್ಮ ಸಂತಸ ವ್ಯಕ್ತಪಡಿಸುತ್ತಾರೆ. ಆದರೆ ಅಂತಿಮವಾಗಿ ಇದು ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪಟಾಕಿಗಳನ್ನು ಸಿಡಿಸುವುದರಿಂದ ಶಬ್ದ ಮಾಲಿನ್ಯ, ವಾಯ ಮಾಲಿನ್ಯ ಹೆಚ್ಚಾಗುವ ಜತೆಗೆ, ಜನರ ಆರೋಗ್ಯದ ಮೇಲೂ ಗಂಭೀರ ಪರಿಣಾಮಗಳನ್ನು ಬೀರುತ್ತಿದೆ.
ಪಟಾಕಿ ನಿಷೇಧಿಸುವ ಬಗ್ಗೆ ಚರ್ಚೆ ಮಾಡುತ್ತಾ ಕೂರುವ ಬದಲಿಗೆ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪಟಾಕಿ ಮಾರಾಟ, ಬಳಕೆ ನಿಷೇಧಿಸುವ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು. ಸರ್ಕಾರವಷ್ಟೇ ಅಲ್ಲದೆ ಸಾರ್ವಜನಿಕರೂ ಈ ವಿಚಾರದಲ್ಲಿ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಪೀಠ ತನ್ನ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.