ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನ ವಿವಾದಕ್ಕೆ ತೆರೆ ಎಳೆಯಲು ಮುಂದಾಗಿರುವ ರಾಜ್ಯ ಸರ್ಕಾರ, ಯಾವುದೇ ಸಂಘಟನೆಗಳಿಗೆ ಅವಕಾಶ ನೀಡದೆ ಸರ್ಕಾರದ ವತಿಯಿಂದಲೇ ಧ್ವಜಾರೋಹಣ ನೆರವೇರಿಸಲು ತೀರ್ಮಾನಿಸಿದೆ. ವಿಧಾನಸೌಧದ ಕಚೇರಿಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಈ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವರು, ಸರ್ಕಾರದ ಪರವಾಗಿ ಕಂದಾಯ ಇಲಾಖೆಯ ಸಹಾಯಕ ಆಯುಕ್ತರಿಂದ ಧ್ವಜಾರೋಹಣ ನಡೆಯಲಿದ್ದು, ರಾಷ್ಟ್ರ ಧ್ವಜದ ನೀತಿ ನಿಯಮಗಳಡಿ ಎಲ್ಲರೂ ಭಾಗವಹಿಸಬಹುದು. ಯಾವುದೇ ಸಂಘಟನೆಗಳಾಗಲಿ, ಶಾಸಕ ಜಮೀರ್ ಅಹ್ಮದ್ ಖಾನ್ ಅವರಾಗಲಿ ವೈಯಕ್ತಿಕವಾಗಿ ಧ್ವಜಾರೋಹಣ ನಡೆಸುವಂತಿಲ್ಲ ಎಂದು ಸ್ಪಷ್ಟಪಡಿಸಿದರು.