ಬೆಂಗಳೂರು:ನಗರದ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಅವಶ್ಯಕತೆ ಇರುವ ಬಡವರಿಗೆ ಆಹಾರ ಕಿಟ್ ಪೂರೈಕೆಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಮಂಗಳವಾರ ವಿಚಾರಣೆಗೆ ಹಾಜರಾಗಿ ಕ್ಷಮೆ ಕೋರಿದರು.
ಬಡವರಿಗೆ ಆಹಾರ ಕಿಟ್ಗಳನ್ನು ಪೂರೈಕೆ ಮಾಡದ ವಿಚಾರವಾಗಿ ಸರ್ಕಾರ ಮತ್ತು ಬಿಬಿಎಂಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್, ಮಂಗಳವಾರದ ಕಲಾಪದಲ್ಲಿ ಈ ಇಬ್ಬರು ಅಧಿಕಾರಿಗಳು ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಅಧಿಕಾರಿಗಳು ನ್ಯಾಯಪೀಠಕ್ಕೆ ಕ್ಷಮೆ ಕೋರಿದರು. ನಮ್ಮಿಂದ ತಪ್ಪಾಗಿದೆ, ಅದಕ್ಕಾಗಿ ನ್ಯಾಯಾಲಯದ ಕ್ಷಮೆಯಾಚಿಸುತ್ತೇವೆ. ಆಗಿರುವ ತಪ್ಪುಗಳನ್ನು ತಿದ್ದಿಕೊಂಡು ಕೋರ್ಟ್ ಆದೇಶಗಳನ್ನು ಪಾಲನೆ ಮಾಡುತ್ತೇವೆ ಎಂದರು.