ಬೆಂಗಳೂರು:ಕೇಂದ್ರ ಮಾಜಿ ಸಚಿವ ಹಿರಿಯ ರಾಜಕಾರಣಿ ಆರ್.ಎಲ್ ಜಾಲಪ್ಪ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಕಳೆದ 40 ದಿನಗಳಿಂದ ಐಸಿಯುವಿನಲ್ಲಿ ಜಾಲಪ್ಪ ಚಿಕಿತ್ಸೆ ಪಡೆಯುತ್ತಿದ್ದರು. 97 ವಯಸ್ಸಿನ ಜಾಲಪ್ಪ ಶ್ವಾಸಕೋಶ ಮತ್ತು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು.
ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಕೋಲಾರ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಅಂತಿಮ ದರ್ಶನಕ್ಕೆ ವ್ಯವಸ್ಥೆ:
ಕೋಲಾರದ ಟಮಕದಲ್ಲಿನ ದೇವರಾಜ ಅರಸು ಮೆಡಿಕಲ್ ಕಾಲೇಜು ಕ್ಯಾಂಪಸ್ನಲ್ಲಿ ರಾತ್ರಿ 10 ಗಂಟೆಯವರೆಗೆ ಜಾಲಪ್ಪ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಜಾಲಪ್ಪ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯಲಾಗುತ್ತದೆ.
ಶನಿವಾರ ಸಂಜೆ ನಾಲ್ಕು ಗಂಟೆಗೆ ತೂಬುಗೆರೆ ಗ್ರಾಮದಲ್ಲಿ ಅಂತಿಮ ದರ್ಶನ ಅವಕಾಶ ಕಲ್ಪಿಸಲಾಗಿದ್ದು, ನಂತರ ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಕ್ಯಾಂಪಸ್ನಲ್ಲಿ ಅಂತಿಮ ವಿಧಿವಿಧಾನ ನೆರವೇರಲಿದೆ.
ಕಣ್ಣು ದಾನ:ಸಾವಿನ ನಂತರ ಜಾಲಪ್ಪ ಅವರ ಕಣ್ಣುಗಳನ್ನು ದಾನ ಮಾಡಲಾಯಿತು.
ಅಂತಿಮ ದರ್ಶನ:
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಆಗಮಿಸಿ, ಜಾಲಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಹಾಗೆಯೇ ಸಚಿವ ಸುಧಾಕರ್, ಮುನಿರತ್ನ ಅವರು ಅಂತಿಮ ನಮನ ಸಲ್ಲಿಸಿದರು.
ಸಂತಾಪ:
ಕೇಂದ್ರ ಮಾಜಿ ಸಚಿವ ಆರ್.ಎಲ್ ಜಾಲಪ್ಪ ಅವರ ನಿಧನಕ್ಕೆ ರಾಜ್ಯ ನಾಯಕರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಆರ್ ಎಲ್ ಜಾಲಪ್ಪ, ರಾಜ್ಯ ರಾಜಕಾರಣದ ಹಿರಿಯ ಮುಖಂಡರು. ಹಲವಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಸಮಾಜಮುಖಿ ಕೆಲಸ ಮಾಡಿದ್ದರು. ಜಾಲಪ್ಪ ಅವರ ನಿಧನದಿಂದ ರಾಜ್ಯದ ಸಾತ್ವಿಕ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬದವರಿಗೆ ಕರುಣಿಸಲಿ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಬೊಮ್ಮಾಯಿ ಕೋರಿದ್ದಾರೆ.
ಮಾಜಿ ಕೇಂದ್ರ ಸಚಿವ, ಹಿರಿಯ ರಾಜಕಾರಣಿ ಆರ್.ಎಲ್.ಜಾಲಪ್ಪ ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಸಂಸದರಾಗಿ, ಸಚಿವರಾಗಿ ಸಾರ್ವಜನಿಕ ಜೀವನದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದರು. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ, ಕುಟುಂಬದವರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದಯಪಾಲಿಸಲಿ. ಓಂ ಶಾಂತಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಇವರ ಜೊತೆಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಹ ಟ್ವೀಟ್ಮಾಡಿದ್ದು, ಕಾಂಗ್ರೆಸ್‌ನ ಹಿರಿಯ ನಾಯಕರಾದ ಶ್ರೀ ಆರ್.ಎಲ್ ಜಾಲಪ್ಪ ಅವರ ನಿಧನದಿಂದಾಗಿ ಪಕ್ಷಕ್ಕೆ ಹಾಗೂ ನಾಡಿಗೆ ತುಂಬಲಾರದ ನಷ್ಟವುಂಟಾಗಿದೆ. ಕೇಂದ್ರ ಸಚಿವರಾಗಿ, ನಾಲ್ಕು ಬಾರಿ ಸಂಸದರಾಗಿ ಜನಸೇವೆಯಲ್ಲಿ ತೊಡಗಿಕೊಂಡಿದ್ದ ಅವರು ಕರ್ನಾಟಕ ರಾಜಕೀಯದಲ್ಲಿ ಪ್ರಮುಖರಾಗಿದ್ದವರು. ಶ್ರೀ ಆರ್.ಎಲ್ ಜಾಲಪ್ಪ ಅವರ ಕುಟುಂಬದವರಿಗೆ ಸಾಂತ್ವನ ಕೋರುತ್ತೇನೆ ಎಂದಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಸಹ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಇವರ ಸಾವಿನಿಂದ ನನ್ನ ಕುಟುಂಬದ ಸದಸ್ಯನಂತಿದ್ದ, ನನ್ನ ಹಿತೈಷಿ ಮತ್ತು ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ. ಅವರ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ ಎಂದಿದ್ದಾರೆ.
ಇದನ್ನೂ ಓದಿ:ರಮೇಶ್ ಕುಮಾರ್ ಒಳ್ಳೆ ಸಂಸದೀಯ ಪಟು ಆಗಿದ್ದವರು, ಅವರ ಈ ನಡವಳಿಕೆ ಸರಿಯಲ್ಲ - ಜಗದೀಶ್ ಶೆಟ್ಟರ್