ಕರ್ನಾಟಕ

karnataka

ETV Bharat / state

ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುತ್ತಿದ್ದಾರೆ; ಎಚ್​ಡಿಕೆ - ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೇಸರ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟ್ವೀಟ್​ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

Former Chief Minister H D Kumaraswamy tweet
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್

By

Published : Mar 21, 2021, 2:11 PM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿರುವ ಹೆಚ್​ಡಿಕೆ, 2022ರ ಹೊತ್ತಿಗೆ ರೈತರ ಆದಾಯ ದ್ವಿಗುಣ ಮಾಡುವುದಾಗಿ ಮೋದಿ ಹೇಳಿದ್ದರು. ಆದರೆ, 2021ರ ವೇಳೆಗೇ ರೈತರ ಕೃಷಿ ಖರ್ಚು-ವೆಚ್ಚ ದುಪ್ಪಟ್ಟಾಗಿದೆ, ರಸಗೊಬ್ಬರ ಬೆಲೆ ಏರಿದೆ. ರೈತರು ಬೋರ್‌ವೆಲ್‌ ಕೊರೆಸಲಾಗದ ಪರಿಸ್ಥಿತಿ ಉದ್ಭವವಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯು ಪರಿಸ್ಥಿತಿಯನ್ನು ವಿಷಮಗೊಳಿಸಿದೆ. ಇನ್ನು ಆದಾಯ ದ್ವಿಗುಣ ಎಲ್ಲಿ ಎಂದು ಕೇಳಿದ್ದಾರೆ.

ಇವತ್ತಿನ ಲೆಕ್ಕಾಚಾರದ ಪ್ರಕಾರ ರೈತರು ಬೋರ್‌ವೆಲ್ ಕೊರೆಸಬೇಕಾದರೆ 1-2 ಲಕ್ಷ ರೂ. ಖರ್ಚು ಮಾಡಬೇಕು. ಪಿವಿಸಿ ಪೈಪ್‌ಗಳ ದರ ದುಪ್ಪಟ್ಟಾಗಿದೆ, ಮೋಟರ್‌ ಬೆಲೆಯಲ್ಲಿ ಜಿಗಿತವಾಗಿದೆ. ಕೃಷಿ ಪಂಪ್‌ ಸೆಟ್‌ಗಳಿಗೆ ರೈತರೇ ಶೇ 18ರಷ್ಟು ಜಿಎಸ್‌ಟಿ ಪಾವತಿಸಬೇಕಿರುವುದು ವಿಷಾದಕರ. ಇದು ಕೃಷಿಗೆ ಪೂರಕ ಸ್ಥಿತಿಯೇ ಎಂಬುದರ ಅವಲೋಕನೆಯಾಗಬೇಕಿದೆ ಎಂದು ಸಲಹೆ ನೀಡಿದ್ದಾರೆ.

ಕೃಷಿ ಪರಿಕರಗಳ ಬೆಲೆ ಏರಿಕೆ ಬಗ್ಗೆ ರಾಜ್ಯದ ಕೃಷಿ ಸಚಿವರು ನೀಡಿರುವ ಹೇಳಿಕೆ ಇಂತಿದೆ- 'ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳದಿಂದಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಹೆಚ್ಚಳಕ್ಕೆ ರೈತರು ಹೊಂದಿಕೊಳ್ಳಬೇಕು,' ಎಂದಿದ್ದಾರೆ. ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರದ ವಿಚಾರ. ಕೃಷಿಯಲ್ಲಿ ಆದಾಯ ಗಳಿಸುವುದು ಇರಲಿ, ಕೃಷಿ ಮಾಡಲೇ ರೈತ ಸಂಕಷ್ಟ ಅನುಭವಿಸಬೇಕಾಗಿರುವುದು ಇವತ್ತಿನ ದುರಂತ. ಇದನ್ನು ನಿವಾರಿಸಲಾಗದೇ ಇರುವುದು ರೈತರ ಆದಾಯ ದ್ವಿಗುಣ ಮಾಡುವ ಕ್ರಮವೇ ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು. ಪರಿಸ್ಥಿತಿ ಹೀಗಿದ್ದು, ಸಮಾವೇಶದಲ್ಲಿ ರೈತರ ಕಲ್ಯಾಣದ ಬಗ್ಗೆ ಮೋದಿ ಅವರು ಆಡುವ ಮಾತುಗಳು ಪ್ರಾಮಾಣಿಕವೇ ಎಂದು ಎಚ್​ಡಿಕೆ ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದೂ, ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಕೇಂದ್ರಿತ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ. ಆದರೆ, ಕರ್ನಾಟಕದಲ್ಲಿ ಯಾವ ಏಕಗವಾಕ್ಷಿ ವ್ಯವಸ್ಥೆ ಇದೆ? ಮೋದಿ ಉತ್ತರಿಸುವರೇ? ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಖುರ್ಚಿ ಹಿಂದೆ ಅಡಗಿ ಕುಳಿತಿರುವ, ರಾಜ್ಯದ ಬಿಜೆಪಿ ಸರ್ಕಾರದ 'ಏಕಗವಾಕ್ಷಿ' ಬಗ್ಗೆ ಬಿಜೆಪಿಯ ಹಿರಿಯ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಅಕ್ರಮದ ಬಗ್ಗೆ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ವಘೋಷಿತ 'ಮಹಾನಾಯಕ-ಏಕಗವಾಕ್ಷಿ' ಬಗ್ಗೆ ಮೋದಿ ಮಾತಾಡುವರೇ? ಎಂದು ಕೇಳಿದ್ದಾರೆ.

ಕರ್ನಾಟಕ ಸರ್ಕಾರದಲ್ಲೇ 'ಏಕಗವಾಕ್ಷಿ'ಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು ಮಮತಾ ಬ್ಯಾನರ್ಜಿ ಬಗ್ಗೆ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿಹಾಕುತ್ತಿರುವ, ಬಿಜೆಪಿ ಸರ್ಕಾರದ 'ಏಕಗವಾಕ್ಷಿ' ವ್ಯವಸ್ಥೆಯನ್ನು ಮೋದಿ ಮೊದಲು ಕೊನೆಗಾಣಿಸಲಿ ಎಂದು ಸಲಹೆ ಇತ್ತಿದ್ದಾರೆ.

ಓದಿ : ಕೊರೊನಾ ಎರಡನೇ ಅಲೆ ಆರ್ಭಟ.. ಆಗುತ್ತಾ ನೈಟ್​ ಕರ್ಫ್ಯೂ? ಸಮಿತಿ ಶಿಫಾರಸು ಏನು?

ABOUT THE AUTHOR

...view details