ನವದೆಹಲಿ:ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಹುರಿಯಾಳುಗಳನ್ನು ಅಂತಿಮಗೊಳಿಸಲು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸುತ್ತಿದ್ದು, ಇಂದು ಸಂಜೆಯೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದಾರೆ.
ಇಂದು ಸಂಜೆಯೊಳಗೆ ಮೊದಲ ಹಂತದಲ್ಲಿ 170- 180 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ದೆಹಲಿಯಲ್ಲಿ ತಿಳಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ನಂತರ ಅವರು ಈ ಮಾಹಿತಿ ನೀಡಿದ್ದಾರೆ.
ಕೆಲ ದಿನಗಳಿಂದ ಸತತ ಸಭೆಗಳನ್ನು ನಡೆಸಿ ನಾಯಕರು, ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣೆ ಮಾಡಲಾಗಿದೆ. ಈ ಮೂಲಕ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಮೂರು ಹಂತದಲ್ಲಿ ಕೋರ್ ಕಮಿಟಿ ಸಭೆಗಳನ್ನು ನಡೆಸಿ ಪ್ರತಿ ಕ್ಷೇತ್ರಕ್ಕೆ ಮೂವರು ಅಭ್ಯರ್ಥಿಗಳನ್ನು ಸೂಚಿಸಿ ಕೇಂದ್ರ ಸಂಸದೀಯ ಮಂಡಳಿಗೆ ಶಿಫಾರಸು ಮಾಡಲಾಗಿದೆ.
ಎರಡು ದಿನಗಳಿಂದ ಕೇಂದ್ರ ಸಂಸದೀಯ ಮಂಡಳಿಯ ಸಭೆ ನಡೆಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ವಿವಿಧ ಉನ್ನತ ನಾಯಕರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಸರತ್ತು ನಡೆಸುತ್ತಿದ್ದಾರೆ. ನಿನ್ನೆ ನಡೆದ ಸಭೆಯಲ್ಲಿ ಪಟ್ಟಿಯನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ಇಂದು ಗೃಹ ಸಚಿವ ಅಮಿತ್ ಶಾ ಮನೆಯಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲಾಗುತ್ತಿದೆ.