ಬೆಂಗಳೂರು: ನಗರದ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಶುಭ ಶುಕ್ರವಾರ ಹಿನ್ನೆಲೆಯಲ್ಲಿ ದೇಗುಲಕ್ಕೆ ಆಗಮಿಸಿದ್ದು, ಪತ್ನಿ ಅನಿತಾ ಕುಮಾರಸ್ವಾಮಿ, ತಾಯಿ ಚನ್ನಮ್ಮ ಹಾಗೂ ಸಹೋದರಿ ಜೊತೆಗಿದ್ದರು.
ಶುಭ ಶುಕ್ರವಾರ ಹಿನ್ನೆಲೆಯಲ್ಲಿ ಕುಟುಂಬಸಮೇತರಾಗಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಹೆಚ್ಡಿಕೆ ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದ ಕುಮಾರಸ್ವಾಮಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಮನೆಯಲ್ಲೇ ವಿಶ್ರಾಂತಿ ಪಡೆದುಕೊಳ್ಳುತ್ತಿರುವ ಅವರು, ಇತ್ತೀಚೆಗೆ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಭಾಷಣ ಮಾಡಿದ್ದರು. ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲು ಮುಖಂಡರು ಹಾಗೂ ಕಾರ್ಯಕರ್ತರಿಗೆ ಸಲಹೆ ನೀಡಿದ್ದರು.
ಇದನ್ನೂ ಓದಿ:ಕಾವೇರಿ ಭಾಗದ ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ಕೊಡಿ, ಸಾಲ ಮನ್ನಾ ಮಾಡಿ: ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ
ಬಿಜೆಪಿ-ಜೆಡಿಎಸ್ ಮೈತ್ರಿ ನೂರಕ್ಕೆ ನೂರರಷ್ಟು ಆಗುತ್ತದೆ-ಜಿ.ಟಿ.ದೇವೇಗೌಡ:ಮತ್ತೊಂದೆಡೆ, ಬಿಜೆಪಿ-ಜೆಡಿಎಸ್ ಮೈತ್ರಿ ನೂರಕ್ಕೆ ನೂರರಷ್ಟು ಆಗುತ್ತದೆ. ಕ್ಷೇತ್ರ ಹಂಚಿಕೆ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ಮಾಜಿ ಸಚಿವ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗು ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಮೈತ್ರಿ ಆಗಲಿದೆ. ಆದರೆ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ಆಗಿಲ್ಲ. ನಾವೂ ಕೇಳಿಲ್ಲ, ಅವರೂ ಹೇಳಿಲ್ಲ. ಸದ್ಯಕ್ಕೆ ನಮಗೆ ಕಾಂಗ್ರೆಸ್ ಪಕ್ಷವನ್ನು ದೂರವಿಡುವುದೇ ಗುರಿ. ಅದಕ್ಕಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಆಗಲಿದೆ ಎಂದಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ನಾಲ್ಕು ತಿಂಗಳು ಆಗಿದೆ. ಭೀಕರ ಬರಗಾಲ ಬಂದಿದ್ದರೂ, ಸಿಎಂ ಸೇರಿದಂತೆ ಎಲ್ಲರೂ ಗ್ಯಾರಂಟಿಯಲ್ಲೇ ಮುಳುಗಿದ್ದಾರೆ. ಸರ್ಕಾರ ನೂರು ದಿನದ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡಿದೆ. ಸರ್ಕಾರ ರಚನೆಯಾಗಿ ನಾಲ್ಕು ತಿಂಗಳಾಗಿದ್ದರೂ, ಇದುವರೆಗೂ ಯಾವುದೇ ಅಭಿವೃದ್ಧಿ ಕಾರ್ಯಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದ್ದಾರೆ. ಸರ್ಕಾರದಲ್ಲಿ ವರ್ಗಾವಣೆ ದಂಧೆ ಹೆಚ್ಚಾಗಿದೆ. ರೈತರ ಕೃಷಿ ಚಟುವಟಿಕೆಗೆ ಯಾವುದೇ ಉಪಕರಣ ಕೊಟ್ಟಿಲ್ಲ. ಹಲವೆಡೆ ಬೆಳೆ ಒಣಗಿ ಹೋಗಿದೆ. 45 ಲಕ್ಷ ರೈತರಿಗೆ ಕೇಂದ್ರ, ರಾಜ್ಯ ಸರ್ಕಾರ ಸೇರಿ ಹಣ ನೀಡುತ್ತಿದ್ದರು. ಆದರೆ ರಾಜ್ಯ ಸರ್ಕಾರ ಈಗ ಅದನ್ನು ನಿಲ್ಲಿಸಿದೆ ಎಂದು ದೂರಿದ್ದಾರೆ.