ಬೆಂಗಳೂರು/ನವದೆಹಲಿ: ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕುಳಿತು ಅಂತಿಮಗೊಳಿಸುತ್ತೇವೆ. ಆ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಮಾಜಿ ಸಿಎಂ ಹಾಗು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಸಂಸತ್ ಭವನದ ಪ್ರಧಾನಿ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೊತೆಗೂಡಿ ಭೇಟಿ ಮಾಡಿ, ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಒಂದು ಕ್ಷೇತ್ರ ಹೆಚ್ಚು ಕಡಿಮೆ ಆಗಬಹುದು ಅಷ್ಟೇ. ಅದರಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಪರಸ್ಪರ ವಿಶ್ವಾಸ ಬೇಕು. ಅದನ್ನು ನಾವು ಉಳಿಸಿಕೊಳ್ಳಬೇಕು. ಅದಕ್ಕೆ ಏನೆಲ್ಲಾ ಮಾಡಬೇಕೋ ಮಾಡುತ್ತೇನೆ. ಜನವರಿ ಅಂತ್ಯದೊಳಗೆ ನಾವು ಎಲ್ಲಾ ನಿರ್ಧಾರ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನೀವು ಎಷ್ಟು ಕ್ಷೇತ್ರ ಕೇಳುತ್ತಿದ್ದೀರಿ ಎಂಬ ಪ್ರಶ್ನೆಗೆ, ನಾವು ಎಷ್ಟು ಕಡೆ ಗೆಲ್ಲುತ್ತೇವೆ ಎನ್ನುವ ಕಡೆಯಷ್ಟೇ ಕ್ಷೇತ್ರಗಳನ್ನು ಕೇಳುತ್ತೇವೆ. ಈ ಬಗ್ಗೆ ನಮ್ಮಲ್ಲಿ ರಿಪೋರ್ಟ್ ಇದೆ. ರಿಪೋರ್ಟ್ ಪ್ರಕಾರ ನಾವು ಕೆಲಸ ಮಾಡುತ್ತೇವೆ. ಇಲ್ಲಿ ಸೀಟು ಹಂಚಿಕೆ ಒಂದೇ ಪ್ರಮುಖ ವಿಷಯ ಅಲ್ಲ. ನಾವು ಪರಸ್ಪರ ವಿಶ್ವಾಸ, ನಂಬಿಕೆಯಿಂದ ಕೆಲಸ ಮಾಡುತ್ತೇವೆ. ಮೂರನೇ ಅವಧಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡರು ಹಾಗು ಹೆಚ್.ಡಿ.ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ನಿಲ್ಲಲ್ಲ:ಇದೇ ಸಂದರ್ಭದಲ್ಲಿ,ತಮ್ಮ ಸ್ಪರ್ಧೆ ಬಗ್ಗೆ ಕೇಳಲಾದ ಪ್ರಶ್ನೆಗೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಉದ್ದೇಶ ನನ್ನ ಮುಂದೆ ಇಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿಗಳು ಬರುತ್ತಿವೆ. ನಾನೇನಿದ್ದರೂ ರಾಜ್ಯ ರಾಜಕಾರಣಕ್ಕೆ ಸೀಮಿತ. ನಾನು ಇಲ್ಲಿಯೇ ಇದ್ದರೆ ರಾಜ್ಯಕ್ಕೆ ಒಳ್ಳೆಯದು ಎನ್ನುವುದು ಅನೇಕರ ಅಭಿಪ್ರಾಯ. ನನ್ನ ಅಭಿಪ್ರಾಯವೂ ಅದೇ ಆಗಿದೆ ಎಂದು ಹೇಳಿದರು.
ಕುಮಾರಸ್ವಾಮಿ ಕೇಂದ್ರ ಸಚಿವರಾಗ್ತಾರಾ ಎನ್ನುವ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದ ಅವರು, ಯಾರ ಹಣೆಯ ಮೇಲೆ ಏನು ಬರೆದಿದೆಯೋ ಗೊತ್ತಿಲ್ಲ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕಾದು ನೋಡೋಣ ಎಂದರು.
ಲೋಕಸಭೆ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಉರುಳುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿ, ಕರ್ನಾಟಕದ ರಾಜಕೀಯದಲ್ಲಿ ಶಿಂಧೆಯೂ ಇದ್ದಾರೆ, ಅಜಿತ್ ಪವಾರ್ ಸಹ ಇದ್ದಾರೆ. ಯಾರು ಮೊದಲು ಮುಂದೆ ಬರುತ್ತಾರೋ ಕಾದು ನೋಡಬೇಕು. ಸದ್ಯದ ಪರಿಸ್ಥಿತಿಯಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾರ್ಮಿಕವಾಗಿ ನುಡಿದರು.
ರಾಜ್ಯ ರಾಜಕೀಯ ಪರಿಸ್ಥಿತಿಯ ಜೊತೆಗೆ ಕೊಬ್ಬರಿ ಖರೀದಿ, ಕಾಡುಗೊಲ್ಲ ಜಾತಿಗೆ ಮೀಸಲಾತಿ ಸೌಲಭ್ಯ ಹಾಗೂ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ದೇವೇಗೌಡರು ಮೋದಿ ಅವರೊಂದಿಗೆ ಚರ್ಚೆ ನಡೆಸಿದರು. ಇದೇ ವೇಳೆ ಕೊಬ್ಬರಿಗೆ ಬೆಂಬಲ ಬೆಲೆ ನೀಡುವುದು ಹಾಗೂ ನಾಫೆಡ್ ಮೂಲಕ ಖರೀದಿ ಮಾಡಬೇಕು ಎಂಬ ಬಗ್ಗೆ ಪ್ರಧಾನಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಬಗ್ಗೆ ಪ್ರಧಾನಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ನಿಖಿಲ್ ಕುಮಾರಸ್ವಾಮಿ ಪ್ರಚಾರ ಮಾಡ್ತಾರೆ: ನಿಖಿಲ್ ಕುಮಾರಸ್ವಾಮಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಾರಾ ಎಂಬುದಕ್ಕೆ, ನಿಖಿಲ್ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಪ್ರಚಾರ ಮಾಡುತ್ತಾರೆ. ಯಾವುದೇ ಕಾರಣಕ್ಕೂ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ, ಜನರು ಚುನಾವಣೆಗೆ ನಿಲ್ಲಿ ಎಂದು ಹೇಳುತ್ತಿದ್ದಾರೆ. ಮಂಡ್ಯ ಕ್ಷೇತ್ರದಿಂದಲೇ ಕಣಕ್ಕಿಳಿಯಲಿ ಎಂದು ಬಯಸುತ್ತಿದ್ದಾರೆ. ಎರಡು ಬಾರಿ ಅವರು ಸೋತಿದ್ದಾರೆ. ಹೀಗಾಗಿ ಜನರ ಅನುಕಂಪವೂ ಇದೆ. ಆದರೆ, ಅವರಿಗೆ ಸ್ಪರ್ಧೆ ಮಾಡುವ ಉದ್ದೇಶವಿಲ್ಲ ಎಂದು ತಿಳಿಸಿದರು.
ಪ್ರಧಾನಿ ಮೋದಿ ಅವರನ್ನು ದೇವೇಗೌಡರು, ನಾನು, ಪ್ರಜ್ವಲ್, ರೇವಣ್ಣ, ಬಾಲಕೃಷ್ಣ ಭೇಟಿ ಮಾಡಿದ್ದೆವು. ಪ್ರತ್ಯೇಕವಾಗಿ ಪ್ರಧಾನಿಗಳ ಜೊತೆ ದೇವೇಗೌಡರು ಮತ್ತು ನಾನು ಬಹಳಷ್ಟು ವಿಚಾರಗಳ ಬಗ್ಗೆ ಚರ್ಚಿಸಿದೆವು. ಮೋದಿ ಅವರು ದೇವೇಗೌಡರ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಮೋದಿಯವರು ನಮ್ಮ ಕುಟುಂಬದ ಬಗ್ಗೆ ಇಟ್ಟಿರುವ ವಿಶ್ವಾಸ ಇವತ್ತಿಗೂ ಕಡಿಮೆಯಾಗಿಲ್ಲ. ನಾನು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಹಲವಾರು ಉತ್ತಮ ಸಲಹೆಗಳನ್ನು ನೀಡಿದ್ದರು ಎಂದು ಸಂತಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಡೆ ಬಗ್ಗೆ ಟೀಕೆ: ಸಂಸತ್ ಭವನದಲ್ಲಿ ಯುವಕರು ಹೊಗೆ ಬಿಟ್ಟ ಪ್ರಕರಣವನ್ನೇ ದೊಡ್ಡದು ಮಾಡಿ ಕಾಂಗ್ರೆಸ್ ಪಕ್ಷ ಸಂಸತ್ ಕಲಾಪವನ್ನು ಹಾಳು ಮಾಡುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ವಿಪಕ್ಷಗಳ ನಡೆ ಸರಿ ಇಲ್ಲ. ಖರ್ಗೆ, ಸಿದ್ದರಾಮಯ್ಯ ಅವರಿಗೆ ನಾನು ಕೇಳಬಯಸುತ್ತೇನೆ, ಸಂಸತ್ ಘಟನೆಯನ್ನೇ ಭದ್ರತಾ ವೈಫಲ್ಯ ಅನ್ನುವುದಾದರೆ ವಿಧಾನಸಭೆಯ ಅಧಿವೇಶನದ ವೇಳೆ ಒಬ್ಬ ವ್ಯಕ್ತಿ ಸದನದೊಳಗೆ ಬಂದು ಒಂದೂವರೆ ಗಂಟೆ ಕಲಾಪದಲ್ಲಿ ಭಾಗಿಯಾಗಿದ್ದ. ಅದನ್ನು ಏನೆಂದು ಕರೆಯಬೇಕು ಎಂದು ಪ್ರಶ್ನಿಸಿದರು.
ಈ ವೈಫಲ್ಯದ ಬಗ್ಗೆ ಯಾಕೆ ಚರ್ಚೆ ಮಾಡುತ್ತಿಲ್ಲ ಕಾಂಗ್ರೆಸ್ಸಿಗರು ಎಂದು ಕೇಳಿದ ಮಾಜಿ ಮುಖ್ಯಮಂತ್ರಿ, ಇದೇ ವಿಧಾನಸಭೆಯ ಕಳೆದ ಕಲಾಪದಲ್ಲಿ ಸಭಾಧ್ಯಕ್ಷರ ಮೇಲೆ ಪೇಪರ್ ಎಸೆದರು ಎಂದು ವಿಪಕ್ಷಗಳ ಶಾಸಕರನ್ನು ಸದನದಿಂದ ಹೊರಹಾಕಿದ್ದರು. ಅದನ್ನು ಏನೆಂದು ಕರೆಯುತ್ತಾರೆ? ಅದು ಯಾವ ರಾಜಕೀಯ? ಒಬ್ಬ ದಲಿತ ಉಪಾಧ್ಯಕ್ಷರು ಅಂಥ ಹೇಳಿ ಶಾಸಕರನ್ನು ಸದನದಿಂದ ಹೊರಹಾಕಿದ್ದರು ಕರ್ನಾಟಕದಲ್ಲಿ. ಇದರ ಬಗ್ಗೆ ಯಾಕೆ ಪ್ರಶ್ನೆ ಮಾಡುತ್ತಿಲ್ಲ ಖರ್ಗೆಯವರೇ ಎಂದರು.
ಇದನ್ನೂ ಓದಿ:ಪ್ರಧಾನಿ ಮೋದಿ ಭೇಟಿಯಾದ ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ