ಬೆಂಗಳೂರು:ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಈಗಾಲೇ 'ಕಾವೇರಿ ಹೋರಾಟ' ಶುರುವಾಗಿದೆ. ನಡುವೆ ಆಸ್ಪತ್ರೆಯಲ್ಲಿದ್ದುಕೊಂಡೇ ಈ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ.
ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೆಚ್ಡಿಕೆ ಅವರ ಆರೋಗ್ಯ ವಿಚಾರಿಸಲು ಮಾಜಿ ಶಾಸಕ ಡಾ.ಕೆ ಅನ್ನದಾನಿ ಇಂದು ತೆರಳಿದ್ದರು. ಅವರ ಜತೆ ಚರ್ಚೆ ನಡೆಸಿದ ಕುಮಾರಸ್ವಾಮಿ ನಾಳೆಯಿಂದ ಜೆಡಿಎಸ್ನಿಂದ ಚಳವಳಿ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಾಹಿತಿ ನೀಡಿದ ಮಾಜಿ ಶಾಸಕ ಅನ್ನದಾನಿ, 'ಸದ್ಯದ ಕಾವೇರಿ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಿದರು. ಅರ್ಧ ಗಂಟೆಗೂ ಹೆಚ್ಚು ಕಾಲ ನನ್ನೊಟ್ಟಿಗೆ ಮಾತನಾಡಿದ್ದಾರೆ. ಅವರು ಆರೋಗ್ಯವಾಗಿದ್ದಾರೆ. ಕಾವೇರಿ ನೀರು ಉಳಿವಿಗಾಗಿ ಹೋರಾಟ ಶುರು ಮಾಡಿ ಎಂದು ಕರೆ ಕೊಟ್ಟಿದ್ದಾರೆ' ಎಂದು ತಿಳಿಸಿದರು.
ನಾಳೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರ ನೇತೃತ್ವದಲ್ಲಿ ಚಳವಳಿ ಆರಂಭವಾಗಲಿದೆ. ಸದ್ಯದ ನೀರಿನ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಮುಂದಿನ ದಿನಗಳಲ್ಲಿ ಮಂಡ್ಯ ಸೇರಿದಂತೆ ಬೆಂಗಳೂರಿಗೂ ನೀರಿನ ಅಭಾವ ಎದುರಾಗಲಿದೆ. ಹೀಗಾಗಿ, ಚಳವಳಿ ಅಗತ್ಯವಿದೆ ಎಂದು ಕುಮಾರಣ್ಣ ಹೇಳಿದ್ದಾರೆ. ಅದರಂತೆ ನಾಳೆಯಿಂದ ಚಳವಳಿ ಆರಂಭಿಸುತ್ತೇವೆ ಎಂದು ಮಾಜಿ ಶಾಸಕ ಅನ್ನದಾನಿ ಹೇಳಿದರು.
ಇನ್ನು ಕುಮಾರಸ್ವಾಮಿ ಅವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರೆದಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೆಚ್ಡಿಕೆ ಆರೋಗ್ಯ ವಿಚಾರಿಸಿದ ಸ್ಪೀಕರ್ ಯು.ಟಿ ಖಾದರ್: ಅನಾರೋಗ್ಯದ ಹಿನ್ನೆಲೆ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಸ್ಪೀಕರ್ ಯು.ಟಿ ಖಾದರ್, ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ. ನನ್ನ ಜೊತೆ ಕೆಲಕಾಲ ಮಾತನಾಡಿದರು. ಎಲ್ಲಾ ಜನರ ಆಶೀರ್ವಾದ ಅವರ ಮೇಲಿದೆ ಎಂದು ಹೇಳಿದರು.
ಕುಮಾರಸ್ವಾಮಿ ಬೇಗ ಗುಣಮುಖರಾಗಲೆಂದು ಬಸವನಗುಡಿ ದೊಡ್ಡ ಗಣೇಶನಿಗೆ ವಿಶೇಷ ಪೂಜೆ ವಿಶೇಷ ಪೂಜೆ: ಹೆಚ್.ಡಿ ಕುಮಾರಸ್ವಾಮಿ ಬೇಗ ಗುಣಮುಖರಾಗಲೆಂದು ಬಸವನಗುಡಿ ದೊಡ್ಡ ಗಣೇಶನಿಗೆ ವಿಶೇಷ ಪೂಜೆ ನೆರವೇರಿಸಲಾಗಿದೆ. ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರು, ದೊಡ್ಡ ಗಣೇಶನಿಗೆ ವಿಶೇಷ ಪೂಜೆ ನೆರವೇರಿಸಿ ಕುಮಾರಸ್ವಾಮಿ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ:ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಜಯನಗರದಲ್ಲಿರುವ ಅಪೊಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಸ್ತು ಹಾಗೂ ತೀವ್ರ ಜ್ವರದಿಂದಾಗಿ ಆ.30ರಂದು ಬೆಳಗಿನಜಾವ 3.40ರ ಸುಮಾರಿಗೆ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತಕ್ಷಣ ಅವರನ್ನು ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗಿತ್ತು. ಕುಮಾರಸ್ವಾಮಿ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿತ್ತು.
ಇದನ್ನೂ ಓದಿ:ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಸ್ಥಿರ: ಅಪೋಲೋ ಆಸ್ಪತ್ರೆ
ನದಿಗಿಳಿದು ರೈತರಿಂದ ಅರೆ ಬೆತ್ತಲೆ ಪ್ರತಿಭಟನೆ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ, ಮಂಡ್ಯದಲ್ಲಿ ದಿನದಿಂದ ದಿನಕ್ಕೆ ಹೋರಾಟಗಳು ಹೆಚ್ಚುತ್ತಿವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ಪ್ರತಿನಿತ್ಯ ನೀರು ಹರಿಸುತ್ತಿದೆ. ಇದನ್ನು ವಿರೋಧಿಸಿ ಇಂದು ಶ್ರೀರಂಗಪಟ್ಟಣದಲ್ಲಿ ಭೂಮಿ ತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ:ಕಾವೇರಿ ನೀರು ವಿವಾದ: ಶ್ರೀರಂಗಪಟ್ಟಣದಲ್ಲಿ ನದಿಗಿಳಿದು ರೈತರಿಂದ ಅರೆಬೆತ್ತಲೆ ಪ್ರತಿಭಟನೆ