ಬೆಂಗಳೂರು: ಮುಂಬರುವ ಜಿಲ್ಲಾ, ತಾಲೂಕು ಪಂಚಾಯಿತಿ ಹಾಗೂ 2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಮತ್ತು ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಜೆಡಿಎಸ್ ನಾಯಕರು ಸಭೆ ನಡೆಸುತ್ತಿದ್ದಾರೆ.
ಜೆಡಿಎಸ್ ಪಕ್ಷದಿಂದ ಮುಂದಿನ ಚುನಾವಣೆಗೆ ಕಸರತ್ತು ಶುರು ಪಕ್ಷದ ಕಚೇರಿ ಜೆ.ಪಿ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಇಂದು ಜಿಲ್ಲಾವಾರು ಸಭೆ ನಡೆಸಲಾಗಿದ್ದು ಬೆಳಗಾವಿ, ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ ಮುಖಂಡರು ಹಾಗೂ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಮುಖಂಡರನ್ನು ಈ ಸಭೆಗೆ ಆಹ್ವಾನಿಸಲಾಗಿತ್ತು.
ಸಭೆಗೂ ಮುನ್ನ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿ, ಮುಂದಿನ ಒಂದು ವಾರಗಳ ಕಾಲ ಪಕ್ಷದ ಕಚೇರಿಯಲ್ಲಿ ಜಿಲ್ಲಾವಾರು ಸಭೆ ಕರೆಯಲಾಗಿದೆ. ಕೊರೊನಾ ಮಹಾಮಾರಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಜಿಲ್ಲೆಗಳಿಗೆ ಹೋಗೋದು ಸೂಕ್ತವಲ್ಲ. ಮುಂದಿನ ಬುಧವಾರದವರೆಗೂ ಸಭೆ ಕರೆದು ಸಂಘಟನೆ ಬಗ್ಗೆ ಚರ್ಚಿಸುತ್ತೇವೆ. ಪದಾಧಿಕಾರಿಗಳ ನೇಮಕದ ಬಗ್ಗೆಯೂ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.
ಜಿಲ್ಲಾ ಪ್ರವಾಸ
ಕೋವಿಡ್ ಸೋಂಕು ನಿಂತ ಬಳಿಕ ಜಿಲ್ಲಾ ಪ್ರವಾಸ ಮಾಡುತ್ತೇನೆ. ಆಷಾಡ ಮಾಸದ ನಂತರ ಜಿಲ್ಲಾ ಪ್ರವಾಸ ಹಮ್ಮಿಕೊಳ್ಳುತ್ತೇನೆ. ಮುಂದಿನ ದಿನಗಳಲ್ಲಿ ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷದ ಅವಶ್ಯಕತೆ ಬಗ್ಗೆ ತಿಳಿಸಲಾಗುವುದು. ರಾಜ್ಯದಲ್ಲಿ ಉಂಟಾದ ಕೋವಿಡ್ ಸಮಸ್ಯೆ, ಶಿಕ್ಷಣ, ಕೃಷಿ, ಯುವಕರಿಗೆ ಉದ್ಯೋಗ ಸೃಷ್ಟಿ ವಿಚಾರ ಬಗ್ಗೆ ಚರ್ಚೆ ಮಾಡುತ್ತೇವೆ. ತಾಲೂಕು, ಜಿಲ್ಲಾ ಪಂಚಾಯಿತಿ, ಮುಂದಿನ ವಿಧಾನಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತೇವೆ. ಇದನ್ನೇ ಜನರ ಬಳಿ ಕೊಂಡೊಯ್ಯುತ್ತೇನೆ ಎಂದು ತಿಳಿಸಿದರು.
ಇದನ್ನೂಓದಿ: ಕೆ.ಆರ್ ಮಾರ್ಕೆಟ್-ಕಲಾಸಿಪಾಳ್ಯ ಮಾರುಕಟ್ಟೆ ವ್ಯಾಪಾರ ಪುನರಾರಂಭ: ಷರತ್ತುಗಳು ಅನ್ವಯ
ಜೆಡಿಎಸ್ ಹಿರಿಯ ಮುಖಂಡ ಬಂಡೆಪ್ಪ ಕಾಶೆಂಪೂರ್, ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಜಿಲ್ಲಾವಾರು ಪಕ್ಷದ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ಹಾಲಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯರು, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ತು ಸದಸ್ಯರುಗಳು, ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ವಿಧಾನಸಭೆ ಉಪ ಚುನಾವಣೆ ಹಾಗೂ ವಿಧಾನ ಪರಿಷತ್ತಿನ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ವಿವಿಧ ವಿಭಾಗಗಳ ಅಧ್ಯಕ್ಷರುಗಳು ಸಭೆಯಲ್ಲಿ ಇದ್ದರು.