ಬೆಂಗಳೂರು:''ಕಳೆದ ಚುನಾವಣೆ ಫಲಿತಾಂಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಟ್ಟುಕೊಂಡಿದ್ದ ಕನಸು ನನಸಾಗದ ಕಾರಣಕ್ಕೆ ಹತಾಶೆಗೊಳಗಾಗಿ ಮಾತನಾಡುತ್ತಿದ್ದಾರೆ'' ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ. ಜನ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಇದನ್ನು ಸಹಿಸಲು ಆಗದ ವಿಪಕ್ಷದ ನಾಯಕರು ವಿನಾಕಾರಣ ಆಧಾರರಹಿತ ಆರೋಪಗಳನ್ನು ಮಾಡುತ್ತಾ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪರಿಣಾಮ ಲೋಕಸಭಾ ಚುನಾವಣೆಯಲ್ಲೂ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ'' ಎಂದರು.
''ಬಿಜೆಪಿಯವರು ತಮ್ಮ ಆಡಳಿತಾವಧಿಯಲ್ಲಿ ದಲಿತರ ಬಗ್ಗೆ ಯಾವುದೇ ಯೋಜನೆ ರೂಪಿಸಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಬಿಜೆಪಿಗೆ ದಲಿತರ ಬಗ್ಗೆ ಕಾಳಜಿ ಹೆಚ್ಚಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ಹಣವನ್ನು ಎಲ್ಲೆಲ್ಲಿ ಬಳಕೆ ಮಾಡಬೇಕು ಎಂಬ ಅರಿವು ನಮ್ಮ ಸರ್ಕಾರಕ್ಕೆ ಇದೆ. ಈ ಎರಡು ಸಮುದಾಯಗಳ ಹಣ ಸದ್ಭಳಕೆ ಬಗ್ಗೆ ಸೂಕ್ತ ಕಾನೂನನ್ನು ತಂದಿದ್ದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು. ಇದೀಗ ಬಿಜೆಪಿ ಈ ಕುರಿತು ಮಾತನಾಡುತ್ತಿದೆ. ಅವರಿಗೆ ಈ ವಿಚಾರಗಳಲ್ಲಿ ಚರ್ಚೆ ನಡೆಸುವ ಯೋಗ್ಯತೆ ಕಳೆದುಕೊಂಡಿದ್ದಾರೆ'' ಎಂದರು.
''ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಲಿದ್ದಾರೆ ಎಂದು ಭಾವಿಸಿದ್ದೆವು. ಆದರೆ, ರಾಜ್ಯಕ್ಕೆ ಬೊಮ್ಮಾಯಿ ಅವರ ಕೊಡುಗೆ ಶೂನ್ಯ. ಪ್ರಮುಖ ವಿಪಕ್ಷವಾಗಿ ಬಿಜೆಪಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಕೇವಲ ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ'' ಎಂದು ಅವರು ಇದೇ ವೇಳೆ ಕಿಡಿಕಾರಿದರು.
ಪಕ್ಷ ಸಂಘಟನೆ ಬಗ್ಗೆ ಚರ್ಚೆ: ''ಮುಂದಿನ ಏಳೆಂಟು ತಿಂಗಳಲ್ಲಿ ಲೋಕಸಭಾ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಹಾಗೂ ಜವಾಬ್ದಾರಿ ಬಗ್ಗೆ ದೆಹಲಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ರಾಜಕೀಯ ಬದಲಾವಣೆಗಳು ಕರ್ನಾಟಕದಿಂದಲೇ ಆರಂಭವಾಗುವುದು. ಹೀಗಾಗಿ ಲೋಕಸಭಾ ಚುನಾವಣೆಗೆ ರಾಜ್ಯದಿಂದಲೇ ಅತೀ ಹೆಚ್ಚು ಸೀಟು ಗೆಲ್ಲಬೇಕು ಎನ್ನುವ ಬಗ್ಗೆ ವರಿಷ್ಠರು ಸೂಚನೆ ನೀಡಿದ್ದು, ಆ ನಿಟ್ಟಿನಲ್ಲಿ ನಾವು ಕಾರ್ಯ ಪ್ರವೃತ್ತರಾಗಲಿದ್ದೇವೆ'' ಎಂದು ಅವರು ತಿಳಿಸಿದರು.
''ಪಕ್ಷದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಲ್ಲವನ್ನೂ ನಿಭಾಯಿಸುತ್ತಾರೆ. ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು ನನಗೆ ಬಹಳ ಆತ್ಮೀಯರು. ಅವರ ಬಗ್ಗೆ ಅಪಾರ ಗೌರವವಿದೆ. ರಾಯರೆಡ್ಡಿ ಅವರು ಹೆಚ್ಚು ಬಾರಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶ ಮಾಡಿದವರು. ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲಾರೆ'' ಎಂದರು.''ಅನಾಥ ಮಕ್ಕಳನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಬಗ್ಗೆ ಆಯೋಗ ವರದಿ ಕೊಟ್ಟಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ'' ಎಂದು ಪ್ರಶ್ನೆಯೊಂದಕ್ಕೆ ತಂಗಡಗಿ ಪ್ರತಿಕ್ರಿಯೆ ನೀಡಿದರು.
'ವಿಶ್ವಾಸ್' ತಂತ್ರಾಂಶದಿಂದ ಯೋಜನೆಗಳು ಫಲಾನುಭವಿಗಳಿಗೆ ತಲುಪಲಿದೆ: ''ಸರ್ಕಾರದ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವುದು ಮತ್ತು ಪಾರದರ್ಶಕತೆ ಕಾಪಾಡಿಕೊಳ್ಳಬೇಕು ಎಂಬ ಕಾರಣದಿಂದ 'ವಿಶ್ವಾಸ್' ಎಂಬ ತಂತ್ರಾಂಶವನ್ನು ಪರಿಚಯಿಸಲಾಗಿದೆ'' ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.