ಬೆಂಗಳೂರು:ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ. ಜಿಂದಾಲ್‌ಗೆ ಲೀಸ್ ಕಂ ಸೇಲ್ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್ ಅವಧಿ ಮುಗಿದಿದ್ದರಿಂದ ಕ್ರಯ ಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂತಾಗಿದೆ ಎಂದು ಕುಟುಕಿದ್ದಾರೆ.