ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ. ಜೊತೆಗೆ ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ ಕೊಡಲು ಸಿದ್ಧತೆ ನಡೆಸಿದೆ. ಅದರ ಹೆಸರು ಕತ್ತಲೆ ಭಾಗ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆ ಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. ಜನವರಿ ಅಂದರೆ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ. ಇದು ಸತ್ಯ ಎಂದಿದ್ದಾರೆ.
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಕಳ್ಳಾಟ :ಕಾವೇರಿ ಬಗ್ಗೆ ಸರ್ಕಾರ ಕಳ್ಳಾಟ ಆಡಿದೆ. ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯದ ವಿರುದ್ಧ ನಿಲುವಳಿ ಸೂಚನೆ ಅಂಗೀಕಾರವಾಗಿದೆ. ಎಮ್ಮೆ ಚರ್ಮದ ಸರಕಾರಕ್ಕೆ ಕಾವೇರಿ ಒಡಲಾಳದ ಬೇಗುದಿ ಬಗ್ಗೆ ಜಾಣ ಕುರುಡು. ಸರಕಾರ ರಾಜ್ಯದ ಉದ್ದಗಲಕ್ಕೂ ಅನಧಿಕೃತ ಲೋಡ್ ಶೆಡ್ಡಿಂಗ್ ಹೇರಿ ದಿನಕ್ಕೆ 2 ಗಂಟೆ ವಿದ್ಯುತ್ತಿಗೂ ದಿಕ್ಕಿಲ್ಲದ ದುಃಸ್ಥಿತಿ ನಿರ್ಮಾಣ ಮಾಡಿದೆ. ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು ಎಂದು ಕಿಡಿಕಾರಿದ್ದಾರೆ.
ರೈತನ ಬೆನ್ನಿಗೆ ಬರೆ ಎಳೆಯುತ್ತಿದೆ :ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವಿದ್ಯುತ್ ಅಭಾವದಿಂದ ಬೆಳೆಗಳು ಒಣಗುತ್ತಿವೆ. ನಾಲೆಗಳಲ್ಲೂ ನೀರಿಲ್ಲ, ಬೋರ್ ವೆಲ್ಗಳಿಂದ ಪಂಪ್ ಮಾಡಲು ವಿದ್ಯುತ್ತೂ ಇಲ್ಲ. ಮೊದಲೇ ಕಷ್ಟದಲ್ಲಿರುವ ರೈತನ ಬೆನ್ನಿನ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ. ವಿದ್ಯುತ್ ಕ್ಷಾಮಕ್ಕೆ ಮೊದಲೇ ಕರ್ನಾಟಕ ವಿದ್ಯುತ್ ಉತ್ಪಾದನೆಯಲ್ಲಿ ಬಂಜರು ಬಿದ್ದಿದೆ. ಉತ್ಪಾದನೆಗೆ ಅಗತ್ಯವಾದ ಮೂಲಗಳ ಕ್ಷಾಮಕ್ಕೆ ತುತ್ತಾಗಿ, ಪರರಾಜ್ಯಗಳ ಮುಂದೆ ದೈನೇಸಿಯಾಗಿ ನಿಂತು ವಿದ್ಯುತ್ ಸಾಲಕ್ಕೆ ಅರ್ಜಿ ಹಾಕಿಕೊಳ್ಳುತ್ತಿದೆ. ಜಲ, ಪವನ, ಸೌರ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಇದು ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣೆಯ ವೈಫಲ್ಯ ಎಂದು ಟೀಕಿಸಿದ್ದಾರೆ.
ಜಲಾಶಯಗಳು ಖಾಲಿಯಾಗಿದ್ದು, ವಿದ್ಯುತ್ ಉತ್ಪಾದನೆ ಮಿತವಾಗಿ ಮಾಡುವಂತೆ ಸರಕಾರವೇ ಆದೇಶಿಸಿದೆ. ಇನ್ನೊಂದೆಡೆ ಉಷ್ಣ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಬವಣೆಯಿಂದ ಅಲ್ಪಸ್ವಲ್ಪ ಉತ್ಪಾದಿಸುತ್ತಿವೆ. ರಾಜ್ಯದ ಒಟ್ಟಾರೆ ಬೇಡಿಕೆಯಲ್ಲಿ ಶೇ.20ರಷ್ಟು ವಿದ್ಯುತ್ತನ್ನು ಸರ್ಕಾರ ಹೊರಗಿನಿಂದಲೇ ಪಡೆಯುತ್ತಿದೆ. ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ, ಕಾಂಗ್ರೆಸ್ ಸರ್ಕಾರ ಕರುನಾಡನ್ನು ಬರ್ಬಾದ್ ಮಾಡಲಿದೆ. ಆದರೆ, ವಿದ್ಯುತ್ ಸಾಲ ನೀಡುವ ಸ್ಥಿತಿಯಲ್ಲಿ ಇತರೆ ರಾಜ್ಯಗಳೂ ಇಲ್ಲ. ಹಾಗಾದರೆ ಮುಂದೇನು? ಸಂಬಂಧಪಟ್ಟ ಸಚಿವರು ಮೌನವ್ರತ ಮಾಡುತ್ತಿದ್ದಾರೆಯೇ? ಎಂದು ವ್ಯಂಗ್ಯವಾಡಿದ್ದಾರೆ.