ಕರ್ನಾಟಕ

karnataka

ETV Bharat / state

ಶಿಕ್ಷಕರ ಆತ್ಮಹತ್ಯೆಯನ್ನು ಸರ್ಕಾರಿ ಕೊಲೆ ಅನ್ನದೇ ಬೇರೇನು ಹೇಳಬೇಕು?: ಸಿದ್ದರಾಮಯ್ಯ ಕಿಡಿ - ಈಟಿವಿ ಭಾರತ ಕನ್ನಡ

ಪಿಂಚಣಿ ಮುಷ್ಕರದಲ್ಲಿ ತೊಡಗಿದ್ದ ಶಿಕ್ಷಕರ ಆತ್ಮಹತ್ಯೆ - ಸರ್ಕಾರಿ ಕೊಲೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ- ಸರ್ಕಾರದ ವಿರುದ್ಧ ಟ್ವೀಟ್​ ಮಾಡಿ ಆಕ್ರೋಶ

siddaramaiah
ಸಿದ್ದರಾಮಯ್ಯ

By

Published : Feb 25, 2023, 1:03 PM IST

ಬೆಂಗಳೂರು: "ಪಿಂಚಣಿ ಮುಷ್ಕರದಲ್ಲಿ ತೊಡಗಿದ್ದ ಶಿಕ್ಷಕರು ಆತ್ಮಹತ್ಯೆಗೆ ಶರಣಾಗಿದ್ದು, ಅದನ್ನು ಸರ್ಕಾರಿ ಕೊಲೆಗಳು ಅನ್ನದೇ ಬೇರೇನು ಹೇಳಬೇಕು" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, "ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸರ್ಕಾರಿ ಕೊಲೆಗಳು ಅನ್ನದೇ ಬೇರೇನು ಹೇಳಬೇಕು?" ಎಂದು ಪ್ರಶ್ನಿಸಿದ್ದಾರೆ.

"ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್​ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರಿಲ್ಲ. ಶಿಕ್ಷಕರು ಕೇಳುತ್ತಿರುವುದು ತಮ್ಮ ಹಕ್ಕಿನ ಪಿಂಚಣಿಯನ್ನು ಎಂಬ ಕನಿಷ್ಠ ಜ್ಞಾನವಾದರೂ ಬಿಜೆಪಿ ಸರ್ಕಾರಕ್ಕೆ ಬೇಡವೇ? ಸಿಎಂ ಬೊಮ್ಮಾಯಿ ಅವರು ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು?" ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್​ ಸರ್ವ ಸದಸ್ಯರ ಸಮಾವೇಶ: ಸಭೆಯಲ್ಲಿ ಇಂದು ಮೂರು ಪಸ್ತಾವನೆಗಳ ಕುರಿತು ಚರ್ಚೆ

"ಅನುದಾನಿತ ಶಾಲಾ ಶಿಕ್ಷಕರು ಪ್ರತಿಭಟನೆ ಆರಂಭಿಸಿ 141 ದಿನಗಳು ಕಳೆದರೂ ಇನ್ನು ಈ ವಿಚಾರ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರ ಇಷ್ಟು ದಿನ ಕೋಮಾದಲ್ಲಿತ್ತು ಎಂಬುದನ್ನು ಸ್ವತಃ ಒಪ್ಪಿಕೊಂಡಿದೆ. ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಯ್​ ಗುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ?" ಎಂದು ಪ್ರಶ್ನಿಸಿದ್ದಾರೆ. "ಕೋಮುಗಲಭೆ ನಡೆದು ಕೊಲೆಯಾದರೆ ಗಂಟೆಯೊಳಗೆ ಹೆಣದ ಸುತ್ತ ನೊಣದಂತೆ ಹೋಗಿ ಕೂರುವ ಬಿಜೆಪಿ ಸರ್ಕಾರಕ್ಕೆ, ಸಾವಿರಾರು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೀವಗಳು ಅಮೂಲ್ಯ ಅನ್ನಿಸುವುದಿಲ್ಲವೇ?" ಎಂದು ಟೀಕಿಸಿದ್ದಾರೆ.

"ಇನ್ನಷ್ಟು ಜೀವಗಳು ಬಲಿಯಾಗುವ ಮುನ್ನ ಮುಷ್ಕರದಲ್ಲಿ ತೊಡಗಿರುವ ಅನುದಾನಿತ ಶಾಲಾ ಶಿಕ್ಷಕರನ್ನು ಕರೆದು ಬಿಜೆಪಿ ಸರ್ಕಾರ ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ತಕ್ಷಣ ಈಡೇರಿಸುವ ಕೆಲಸ ಮಾಡಬೇಕು ಮತ್ತು ಈಗಾಗಲೇ ಪ್ರಾಣ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು" ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ಕಟು ಸತ್ಯ ಎದುರಿಸುವ ಕಾಲ ಬಂದಿದೆ, ಅಕ್ರಮದ ಬಗ್ಗೆ ತನಿಖೆ ಆಗಲಿದೆ: ಸಿಎಂ

ABOUT THE AUTHOR

...view details