ಬೆಂಗಳೂರು:ಲಾಕ್‌ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಈಡಾಗಿರುವ ರೈತರ ಸಹಕಾರಕ್ಕೆ ಸರ್ಕಾರ ಮುಂದಾಗಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಲಬುರಗಿಯ ರೈತನೊಬ್ಬ ತಾನು ಬೆಳೆದ ಕಲ್ಲಂಗಡಿ ಮಾರಾಟ ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದು ಆಘಾತಕಾರಿ ಬೆಳವಣಿಗೆ. ಪರಿಸ್ಥಿತಿ ಕೈ ಮೀರುವ ಮೊದಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣ ರೈತರ ಕಷ್ಟ ನಿವಾರಣೆಗೆ ಕಾರ್ಯಪ್ರವೃತ್ತರಾಗಬೇಕು ಎಂದಿದ್ದಾರೆ.
ಒಂದೆಡೆ ರೈತರು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೆ ಕಷ್ಟದಲ್ಲಿದ್ದಾರೆ. ಇನ್ನೊಂದೆಡೆ ಬಳಕೆದಾರರು ತರಕಾರಿ-ಹಣ್ಣುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸಲು ಹಾಪ್ ಕಾಮ್ಸ್ ರೈತರಿಂದ ಉತ್ಪನ್ನ ಖರೀದಿಸಿ ಬಳಕೆದಾರರಿಗೆ ಮಾರಾಟ ಮಾಡಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರ ರೈತರಿಂದ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸುವ ಪ್ರಮಾಣವನ್ನು 20 ಕ್ವಿಂಟಾಲ್‌ಗೆ ಹೆಚ್ಚಿಸಲು ನಿರಾಕರಿಸಿರುವುದು ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವ ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಬೆಂಬಲ ಬೆಲೆಗೆ ಖರೀದಿಸುವ ತೊಗರಿಯನ್ನು 20 ಕ್ವಿಂಟಾಲ್‌ಗೆ ಹೆಚ್ಚಿಸಲು ಯಡಿಯೂರಪ್ಪ ಮಾಡಿರುವ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿ, ರಾಜ್ಯಕ್ಕೆ ಅನ್ಯಾಯ ಮಾಡಿದೆ.
ಸಿದ್ದರಾಮಯ್ಯ ಸಿಎಂಗೆ ಬರೆದ ಪತ್ರ
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಬೆಂಬಲ ಬೆಲೆಗೆ ತೊಗರಿ ಖರೀದಿಸಿ ಪಡಿತರ ಅಂಗಡಿಗಳಲ್ಲಿ ವಿತರಿಸುವ ವ್ಯವಸ್ಥೆ ಮಾಡಬೇಕು. ರಾಜ್ಯದಲ್ಲಿ ಅಕ್ಕಿ ಗಿರಣಿಗಳನ್ನು ಮುಚ್ಚಿರುವ ಕಾರಣ ಪೂರೈಕೆ ಇಲ್ಲದೆ ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಏರತೊಡಗಿದೆ. ಇದರಿಂದಾಗಿ ಅಕ್ರಮ ದಾಸ್ತಾನಿನ ಆರೋಪ ಕೇಳಿಬರುತ್ತಿದೆ. ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಅಕ್ಕಿ ಗಿರಣಿಗಳನ್ನು ತೆರೆಸಿ ಅಕ್ಕಿ ಪೂರೈಕೆಯನ್ನು ಸುಗಮಗೊಳಿಸಬೇಕು ಎಂಬ ಸಲಹೆ ನೀಡಿದ್ದಾರೆ.