ಬೆಂಗಳೂರು: ಕಾಂಗ್ರೆಸ್ನ ಹಿರಿಯ ನಾಯಕ,ಮುತ್ಸದ್ದಿ ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನದ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ಅವರ ಕುಟುಂಬ ಸದಸ್ಯರು ಮತ್ತು ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಅವರ ಆತ್ಮಕೆ ಶಾಂತಿ ಸಿಗಲಿ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಟ್ವೀಟ್ ಮಾಡಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನ ಸುದ್ದಿ ತಿಳಿದು ತೀವ್ರ ದುಃಖವಾಯಿತು. ದುಃಖಿತ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪ ಸಲ್ಲಿಸುತ್ತಿದ್ದು ದುಃಖ ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೆ ನೀಡಲಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಮಾಜಿ ರಾಷ್ಟ್ರಪತಿಗಳು, ಹಿರಿಯ ಮುತ್ಸದ್ದಿಗಳು ಆಗಿದ್ದ ಪ್ರಣಬ್ ಮುಖರ್ಜಿಯವರು ನಮ್ಮನ್ನು ಅಗಲಿರುವುದು ದುರ್ದೈವ.ಶ್ರೀಯುತರ ಅಗಲಿಕೆಯಿಂದಾಗಿ ನಾವೆಲ್ಲಾ ಒಬ್ಬ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ. ರಾಷ್ಟ್ರದ ಹಿತ ಕಾಯುವ ಸಂದರ್ಭದಲ್ಲಿ ಅತ್ಯಂತ ಗಟ್ಟಿ ನಿಲುವನ್ನು ತೆಗೆದುಕೊಳ್ಳುತ್ತಿದ್ದ ದಿವಂಗತರು, ಯಾವುದೇ ಸಂದರ್ಭದಲ್ಲಿಯೂ ತತ್ವನಿಷ್ಠಗಳೊಂದಿಗೆ ರಾಜಿ ಮಾಡಿಕೊಳ್ಳುತ್ತಿರಲಿಲ್ಲ. ಅವರು ಕೇಂದ್ರ ಸಚಿವರಾಗಿದ್ದಾಗ ಭಾರತದ ಹಿರಿಮೆ ಗರಿಮೆಗಳನ್ನು ಹಲವು ಸಂದರ್ಭಗಳಲ್ಲಿ ಅಂತರಾಷ್ಟ್ರೀಯ ಮಟ್ಟಗಳಲ್ಲಿ ಎತ್ತಿಹಿಡಿದ ಶ್ರೇಯಸ್ಸು ಅವರಿಗೆ ಸೇರಿದೆ.ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರಿಗೆ ಮತ್ತು ಬಂಧು ಮಿತ್ರರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಡಿಸಿಎಂ ಲಕ್ಷ್ಮಣ ಸವದಿ ಪ್ರಾರ್ಥಿಸಿದ್ದಾರೆ. ಭಾರತದ 13ನೇ ರಾಷ್ಟ್ರಪತಿಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ವಿಧಿವಶರಾಗಿರುವುದು ಬಹಳ ನೋವಿನ ಸಂಗತಿ. ಇವರದ್ದು ಸಂಸತ್ತಿನಲ್ಲಿ ಐದು ದಶಕಗಳ ಕಾಲದ ವೃತ್ತಿಜೀವನವಾಗಿತ್ತು. ಇವರು ಹಲವಾರು ಮಂತ್ರಿ ಪದವಿಯನ್ನು ನಿಭಾಯಿಸಿದ್ದಾರೆ. ರಕ್ಷಣಾ, ವಿತ್ತ, ಬಾಹ್ಯ ಇಲಾಖೆ, ಆದಾಯ, ನೌಕಾ, ಸಾರಿಗೆ, ಸಂಪರ್ಕ ವ್ಯವಸ್ಥೆ, ಆರ್ಥಿಕ ಇಲಾಖೆ, ವಾಣಿಜ್ಯ ಹಾಗು ಉದ್ದಿಮೆ ಸಚಿವರಾಗಿಯೂ ಸೇವೆ ಸಲ್ಲಿಸಿರುವ ಶ್ರೀಯುತರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ಭರಿಸಲಾಗದ ನಷ್ಟ.ಉಪಾಧ್ಯಾಯರಾಗಿ ವೃತ್ತಿ ಆರಂಭಿಸಿದ್ದ ಪ್ರಣಬ್ ಮುಖರ್ಜಿ ಅವರು ಸದಾ "ನಾನಾ ರಾಜ್ಯ, ದೇಶಗಳ ಜನರೊಂದಿಗೆ ಸಂವಹನ ಮಾಡುವ ಅವಕಾಶವನ್ನು ನೀಡಿ, ಎಲ್ಲರನ್ನೂ ಒಂದುಗೂಡಿಸುವಂತೆ ಮಾಡುವುದು ಭಾಷೆ ಹಾಗೂ ಸಾಹಿತ್ಯದಿಂದ ಮಾತ್ರ ಸಾಧ್ಯ" ಎನ್ನುತ್ತಿದ್ದರು.ಇವರ ಆತ್ಮಕ್ಕೆ ದೇವರು ಶಾಂತಿಯನ್ನು ಹಾಗೂ ಅವರ ಕುಟುಂಬಕ್ಕೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಕೃಷಿ ಸಚಿವ ಬಿ.ಸಿ ಪಾಟೀಲ್ ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ ಅವರು ವಿಧಿವಶರಾದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಿ ಕುಟುಂಬ ವರ್ಗದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಇತರ ಸಂಪುಟ ಸಹೋದ್ಯೋಗಿಗಳು ಹಾಗು ಬಿಜೆಪಿ ನಾಯಕರು ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.