ಮಾಜಿ ಪ್ರಧಾನಿ -ಸಿಎಂ ಅನಿರೀಕ್ಷಿತ ಭೇಟಿ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಅನಿರೀಕ್ಷಿತವಾಗಿ ಭೇಟಿಯಾದರು.
ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು.
ಈ ವೇಳೆ ಮುಖ್ಯಮಂತ್ರಿಗಳು ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು. ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು. ಕೆಲ ಕಾಲ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರರು ಬೀಳ್ಕೊಟ್ಟರು. ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ ಬಹುಕಾಲಗಳ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ದೊಡ್ಡ ಗೌಡರು ಪರಸ್ಪರ ಭೇಟಿಯಾಗಿದ್ದಾರೆ. ಬಿಜೆಪಿ ಜೊತೆಗಿನ ಮೈತ್ರಿ ಬಳಿಕ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಹಾಗೂ ದೇವೆಗೌಡರನ್ನು ಟೀಕಿಸಿದ್ದರು. ಬದುಕಿರುವವರೆಗೂ ಬಿಜೆಪಿ ಜತೆಗೆ ಸೇರುವುದಿಲ್ಲ ಎಂದು ಹೆಚ್.ಡಿ ದೇವೇಗೌಡರು ಹೇಳಿದ್ದರು. ಈಗ ಅವರೇ ಬಿಜೆಪಿ ಜತೆ ಕೈಜೋಡಿಸುತ್ತಿದ್ದಾರೆ. ಎಲ್ಲಿ ಹೋಯ್ತು ಜಾತ್ಯತೀತ ಮೌಲ್ಯ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದರು. ಇದಾದ ಬಳಿಕ ಬಹು ಕಾಲಗಳ ಬಳಿಕ ಆಕಸ್ಮಿಕವಾಗಿ ದೇವೇಗೌಡರು ಹಾಗೂ ಸಿಎಂ ಸಿದ್ದರಾಮಯ್ಯ ಪರಸ್ಪರ ಭೇಟಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು. ಬಹಳ ವರ್ಷಗಳ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.
ಸಿಡಬ್ಲ್ಯೂಸಿ ಸಭೆಗೆ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ :ಸೋಮವಾರ ದೆಹಲಿಯಲ್ಲಿ ಸಿಡಬ್ಲ್ಯೂಸಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ಭಾನುವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. ಸಿಡಬ್ಲ್ಯೂಸಿ ಸಭೆಯಲ್ಲಿ ಪ್ರಮುಖವಾಗಿ ಕಾಂಗ್ರೆಸ್ ಮುಂದಿನ ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಿದೆ. ಇತ್ತ ಸಿಎಂ ದೆಹಲಿ ಭೇಟಿ ವೇಳೆ ಕೆಲಸ ಕೇಂದ್ರ ಸಚಿವರನ್ನೂ ಭೇಟಿಯಾಗುವ ಸಾಧ್ಯತೆ ಇದೆ.
ಖಾಸಗಿ ಕಾರ್ಯಕ್ರಮಕ್ಕೆ ಸಿಎಂಗೆ ಅಹ್ವಾನ :ಮತ್ತೊಂದೆಡೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರ ಶಿಲ್ಪದ ಸಂಗ್ರಹದ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವ ಹೆಚ್.ಎಂ ರೇವಣ್ಣ ಜೊತೆಗಿದ್ದರು. ನಗರದ ಖಾಸಗಿ ಹೊಟೇಲ್ನಲ್ಲಿ ಅ.16ರಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಇದನ್ನೂ ಓದಿ :ಇಸ್ರೇಲ್ - ಪ್ಯಾಲೆಸ್ಟೇನ್ ಸಂಘರ್ಷ : ಸಿಲುಕಿದ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭಿಸಿದ ಸರ್ಕಾರ