ಬೆಂಗಳೂರು/ಧಾರವಾಡ:ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ (Shakti Scheme, Free bus travel for women) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಚಾಲನೆ ನೀಡಿದ್ದು, ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಇನ್ನು ಯೋಜನೆ ಜಾರಿಯಾದ ಬಳಿಕ ವೃದ್ಧೆಯೊಬ್ಬರು ಮೊದಲ ಬಾರಿಗೆ ಬಸ್ನಲ್ಲಿ ಉಚಿತವಾಗಿ ಸಂಚರಿಸುವ ಮುನ್ನ ನಮಸ್ಕರಿಸಿ ಬಸ್ ಹತ್ತಿರುವ ಚಿತ್ರ ಗಮನ ಸೆಳೆಯುತ್ತಿದೆ.
ಬಸ್ಗೆ ವೃದ್ಧೆ ನಮಸ್ಕರಿಸುವ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಅವರು ಕೂಟ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. 'ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು' ಎಂದು ಸಿಎಂ ಬರೆದುಕೊಂಡಿದ್ದಾರೆ.
ಸಿಎಂ ಸಂತೃಪ್ತಿ:'ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೇ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು.
ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ. ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು' ಎಂದು ವೃದ್ಧೆ ಬಸ್ ಏರುವ ಸಂದರ್ಭ ನಮಸ್ಕರಿಸುತ್ತಿರುವ ಚಿತ್ರವನ್ನು ಸಿಎಂ ಲಗತ್ತಿಸಿದ್ದಾರೆ.