ಬೆಂಗಳೂರು: ರಾಜ್ಯದ ದಿವ್ಯಾಂಗ ವಿದ್ಯಾರ್ಥಿಗಳಿಗೆ ಮುಂಬರುವ ಶೈಕ್ಷಣಿಕ ವರ್ಷದಿಂದ ಬ್ರೈಲ್ ಲಿಪಿಯಲ್ಲಿ ಕಲಿಕಾ ಮತ್ತು ಶೈಕ್ಷಣಿಕ ಸಾಮಾಗ್ರಿಗಳನ್ನು ಉಚಿತವಾಗಿ ಪೂರೈಸಲು ಮತ್ತು ಅವುಗಳನ್ನು ಡಿಜಿಟಲ್ ರೂಪದಲ್ಲಿ ಆನ್‍ಲೈನ್‍ನಲ್ಲಿ 'ಇಪಿಯುಬಿ-3' ಮಾದರಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‍ಗೆ ಮಾಹಿತಿ ನೀಡಿದೆ.
ಅಂಧ ಮತ್ತು ವಿಶೇಷ ಸಾಮರ್ಥ್ಯವುಳ್ಳ 1ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಸಾಮಾಗ್ರಿಗಳನ್ನು ಪೂರೈಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ದಿ ನ್ಯಾಷನಲ್ ಫೆಡರೇಷನ್ ಆಫ್ ದಿ ಬ್ಲೈಂಡ್ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಮಕ್ಕಳ ಪಠ್ಯಪುಸ್ತಕಗಳ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ಪಠ್ಯ ಪುಸ್ತಕ ಸಂಘವು, ದಿವ್ಯಾಂಗ ಹಾಗೂ ವಿಶೇಷ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ರಾಜ್ಯ ಪಠ್ಯ ಕ್ರಮದ 1ರಿಂದ 10ನೇ ತರಗತಿಯ ಪಠ್ಯಪುಸ್ತಕಗಳನ್ನು ಇಪಿಯುಬಿ-3 ಮಾದರಿಯಲ್ಲಿ ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳಲು ರಾಜ್ಯ ಪಠ್ಯಪುಸ್ತಕ ಸಂಘದ ಉಪನಿರ್ದೇಶಕರ ನೇತೃತ್ವದಲ್ಲಿ 10 ಮಂದಿಯ ಸಮಿತಿ ರಚಿಸಲಾಗಿದೆ ಎಂದರು.