ನವದೆಹಲಿ: ಜಿ20 ಶೃಂಗಸಭೆಯ ಗೌರವಾರ್ಥ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಆಯೋಜಿಸಿರುವ ಭೋಜನಕೂಟದಲ್ಲಿ ವಿದೇಶಿ ಅತಿಥಿಗಳು, ಸಂಸದರು, ಕ್ಯಾಬಿನೆಟ್ ಸಚಿವರು ಮತ್ತು ಮಾಜಿ ಪ್ರಧಾನಿಗಳು ಭಾಗವಹಿಸಲಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಮತ್ತು ಮನಮೋಹನ್ ಸಿಂಗ್ ಅವರಿಗೆ ಆಹ್ವಾನ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇನ್ನೂ ಆಹ್ವಾನ ತಲುಪಿಲ್ಲ ಎಂದು ಅವರ ಕಚೇರಿ ಹೇಳಿದೆ.
ಔತಣಕೂಟಕ್ಕೆ ದೇವೇಗೌಡರು ದೂರ:ಜಿ20 ಶೃಂಗಸಭೆಯ ಅಂಗವಾಗಿ ನವದೆಹಲಿಯಲ್ಲಿ ಏರ್ಪಡಿಸುವ ಔತಣಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಶನಿವಾರ ರಾಷ್ಟ್ರಪತಿ ಏರ್ಪಡಿಸಿರುವ ಔತಣಕೂಟದಲ್ಲಿ ನಾನು ಭಾಗವಹಿಸುವುದಿಲ್ಲ. ಅನಾರೋಗ್ಯದ ಕಾರಣಗಳಿಂದಾಗಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ರಾಷ್ಟ್ರಪತಿಗೆ ತಿಳಿಸಿರುವ ಗೌಡರು, ಈ ವಿಚಾರವನ್ನು ಈಗಾಗಲೇ ಕೇಂದ್ರ ಸರ್ಕಾರದ ಗಮನಕ್ಕೂ ತಂದಿದ್ದೇನೆ. ಜಿ20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ದಾರೆ.
ಮತ್ತೊಂದೆಡೆ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಷ್ಟ್ರಪತಿಗಳ ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಶುಕ್ರವಾರ ಮಧ್ಯಾಹ್ನ ಬಂಗಾಳದಿಂದ ದೆಹಲಿಗೆ ತೆರಳಲಿದ್ದಾರೆ ಎಂದು ಹೇಳಲಾಗಿದೆ. ಔತಣಕೂಟದ ಜೊತೆಗೆ ದೆಹಲಿಯಲ್ಲಿ ಮಮತಾ ವಿವಿಧ ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ವರದಿಯಾಗಿದೆ.