ಬೆಂಗಳೂರು:ತಮ್ಮ ಮಾಲೀಕತ್ವದ ಬಸ್‌ನಲ್ಲಿ ಮಾದಕ ವಸ್ತುಗಳ ಸಾಗಾಟ ಮಾಡಿರುವ ಆರೋಪದಲ್ಲಿ ಕಾಂಗ್ರೆಸ್ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರ ಪತ್ನಿ ಮಂಜುಳಾ ಅಭಯ್‌ಚಂದ್ರ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.
ಅಲ್ಲದೆ, ಪ್ರಕರಣಕ್ಕೂ ಅರ್ಜಿದಾರರಿಗೂ ಸಂಬಂಧವಿಲ್ಲ ಎಂಬುದಕ್ಕೆ ಸಂಬಂಧಿಸಿದಂತೆ ಯಾವುದೇ ಬಲವಾದ ಸಾಕ್ಷ್ಯಾಧಾರಗಳು ಇಲ್ಲ. ಈ ನಿಟ್ಟಿನಲ್ಲಿ ಪ್ರಕರಣದಲ್ಲಿ ಅರ್ಜಿದಾರರಾದ ಮಂಜುಳಾ ವಿಚಾರಣೆ ಎದುರಿಸಬೇಕಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ತಮ್ಮ ವಿರುದ್ಧ ಉತ್ತರಕನ್ನಡ ಜಿಲ್ಲೆಯ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಗೊಳಿಸುವಂತೆ ಕೋರಿ ಮಂಜುಳಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಧಾರವಾಡ ಪೀಠದ ನ್ಯಾ.ಜೆ.ಎಂ. ಖಾಝಿ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿದೆ. ಅಲ್ಲದೆ, ಅರ್ಜಿಯನ್ನು ವಜಾಗೊಳಿಸಿದ್ದು, ಪ್ರಕರಣ ಸಂಬಂಧ ವಿಚಾರಣೆ ಎದುರಿಸುವಂತೆ ಸೂಚನೆ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಬಸ್‌ನ ಮಾಲೀಕತ್ವ ಅರ್ಜಿದಾರರ ಹೆಸರಿನಲ್ಲಿದ್ದರೂ, ಬಸ್‌ನ ನಿರ್ವಹಣೆಗೆ ಗುತ್ತಿಗೆ ರೂಪದಲ್ಲಿ ಗಣೇಶ್ ಟ್ರಾವೆಲ್ಸ್‌ಗೆ ನೀಡಲಾಗಿದೆ. ಅಕ್ರಮ ಮಾದಕ ವಸ್ತುಗಳ ಸಾಗಾಟಕ್ಕೂ ಮಾಲೀಕರಿಗೂ ಯಾವುದೇ ಸಂಬಂಧ ಇಲ್ಲ. ಈ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯಲ್ಲಿ ಅರ್ಜಿದಾರರ ವಿರುದ್ಧ ನಡೆಯುತ್ತಿರುವ ವಿಚಾರಣೆ ಮತ್ತು ಆರೋಪ ಪಟ್ಟಿಯನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ವಕೀಲರು, ಪ್ರಕರಣ ಸಂಬಂಧ ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ಈ ಸಂದರ್ಭದಲ್ಲಿ ಬಸ್‌ನ್ನು ಗಣೇಶ್ ಟ್ರಾವೆಲ್ಸ್‌ಗೆ ನೀಡಿರುವುದು ಮತ್ತು ಈ ಕುರಿತು ಒಪ್ಪಂದ ಮಾಡಿಕೊಂಡಿರುವ ಬಗ್ಗೆ ಯಾವುದೇ ದಾಖಲೆಗಳನ್ನು ನೀಡಿರಲಿಲ್ಲ ಎಂದು ವಾದಿಸಿದರು.