ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಸದ ವಾಹನಗಳ ದಾಖಲಾತಿ, ಇನ್ನಿತರ ದೋಷಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೌರವ್ ಗುಪ್ತ ಎಚ್ಚರಿಕೆ ನೀಡಿದರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆಯ ಕಸದ ಲಾರಿ ಡಿಕ್ಕಿ ಹೊಡೆದು ಆಕಸ್ಮಿಕವಾಗಿ ಘಟನೆ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದರು.
ಕಸದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಬ್ಯಾಟರಾಯನಪುರ ಸಂಚಾರ ಠಾಣಾ ವ್ಯಾಪ್ತಿಯ ನಾಯಂಡಹಳ್ಳಿ ಬಳಿ ಇತ್ತೀಚೆಗೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪಾಲಿಕೆ ಕ್ರಮಕ್ಕೆ ಮುಂದಾಗಿದೆ.
ಘನತ್ಯಾಜ್ಯ ವಿಲೇವಾರಿ ವಾಹನಗಳ ದಾಖಲೆಗಳ ಪರಿಶೀಲನೆ ಮಾಡಲಾಗುತ್ತದೆ. ಮೇಲ್ಸೇತುವೆ, ಜಂಕ್ಷನ್ ಅಕ್ಕಪಕ್ಕ ಬಹಳ ವೇಗವಾಗಿ ವಾಹನಗಳ ಸಂಚಾರ ಇರುತ್ತದೆ. ಇದಕ್ಕೆ ತಡೆ ಹಾಕಲು ಪೊಲೀಸರ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದರು.