ಕರ್ನಾಟಕ

karnataka

ETV Bharat / state

ಗೌರಿ ಲಂಕೇಶ್ ಕೊಲೆ ಪ್ರಕರಣ: ಆರೋಪಿಗಳಿಗೆ ಆಶ್ರಯ ನೀಡಿದ್ದ ಮೋಹನ್ ನಾಯಕ್​ಗೆ ಷರತ್ತುಬದ್ಧ ಜಾಮೀನು

Gauri Lankesh Murder Accused Granted Bail: ಗೌರಿ ಲಂಕೇಶ್ ಕೊಲೆ ಪ್ರಕರಣದ 11 ನೇ ಆರೋಪಿ ಮೋಹನ್ ನಾಯಕ್​ಗೆ ರಾಜ್ಯ ಹೈಕೋರ್ಟ್​ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

high court
ಹೈಕೋರ್ಟ್

By ETV Bharat Karnataka Team

Published : Dec 9, 2023, 6:51 AM IST

Updated : Dec 9, 2023, 10:17 AM IST

ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ್ದ ಆರೋಪಕ್ಕೆ ಗುರಿಯಾಗಿರುವ ಎನ್. ಮೋಹನ್ ನಾಯಕ್ ಅಲಿಯಾಸ್ ಸಂಪಾಜೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇವರು ಇಡೀ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಮೊದಲ ಆರೋಪಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯ ಎನ್ ಮೋಹನ್ ನಾಯಕ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ. ಅಲ್ಲದೇ, ಒಂದು ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರು ಭದ್ರತಾ ಖಾತರಿ ಒದಗಿಸಬೇಕು. ವಿಚಾರಣಾಧೀನ ನ್ಯಾಯಾಲಯ ಅನುಮತಿಸದ ಹೊರತು ಪ್ರತಿ ವಿಚಾರಣೆಗೂ ಆರೋಪಿ ನ್ಯಾಯಾಲಯದ ಮುಂದೆ ಹಾಜರಾಗಬೇಕು ಮತ್ತು ನ್ಯಾಯಾಲಯದ ವ್ಯಾಪ್ತಿಯಿಂದ ಹೊರಹೋಗುವಂತಿಲ್ಲ. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಇಂಥದ್ದೇ ಪ್ರಕರಣದಲ್ಲಿ ಮತ್ತೆ ಭಾಗಿಯಾಗುವಂತಿಲ್ಲ ಎಂಬ ಷರತ್ತುಗಳನ್ನು ನ್ಯಾಯಪೀಠ ವಿಧಿಸಿದೆ.

ಪ್ರಕರಣದಲ್ಲಿ ಒಟ್ಟಾರೆ 527 ಸಾಕ್ಷಿಗಳಿದ್ದು, ಇದುವರೆಗೆ 90 ಸಾಕ್ಷಿಗಳ ವಿಚಾರಣೆಯಾಗಿದೆ. 2021ರ ಅಕ್ಟೋಬರ್ 30 ರಂದು ಆರೋಪಿಗಳ ವಿರುದ್ಧ ಆರೋಪ ನಿಗದಿಯಾಗಿದೆ. ಕಳೆದ ಎರಡು ವರ್ಷಗಳಿಗೂ ಹೆಚ್ಚು ಕಾಲದಿಂದ 90 ಸಾಕ್ಷಿಗಳನ್ನು ಮಾತ್ರ ವಿಚಾರಣೆ ನಡೆಸಲಾಗಿದೆ. ಇನ್ನೂ 400ಕ್ಕೂ ಹೆಚ್ಚು ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಬೇಕಿದೆ. ಎರಡು ವರ್ಷವಾದರೂ 90 ಸಾಕ್ಷಿಗಳ ಮಾತ್ರ ವಿಚಾರಣೆಯಾಗಿರುವುದರಿಂದ ಪ್ರಕರಣದ ವಿಚಾರಣೆ ಶೀಘ್ರದಲ್ಲಿ ಮುಗಿಯುವ ಸಾಧ್ಯತೆ ಇಲ್ಲ ಎಂದು ಪೀಠ ತಿಳಿಸಿದೆ.

ಅಲ್ಲದೇ, ಇತರ ಆರೋಪಿಗಳ ಜೊತೆ ಸೇರಿ ಗೌರಿ ಕೊಲೆ ಮಾಡಿರುವ ಆರೋಪ ಎದುರಿಸುತ್ತಿರುವ ಮೋಹನ್ ನಾಯಕ್ 2018ರ ಜುಲೈ 18 ರಿಂದ ನ್ಯಾಯಾಂಗ ವಶದಲ್ಲಿದ್ದಾರೆ. ಪ್ರಕರಣದ ಯಾವೊಬ್ಬ ಸಾಕ್ಷಿಯು ಆರೋಪಿಗಳ ಸಭೆಯಲ್ಲಿ ಮೋಹನ್ ನಾಯಕ್ ಭಾಗಿಯಾಗಿರಲಿಲ್ಲ. ಬಹುತೇಕ ಸಾಕ್ಷಿಗಳು ಬೆಂಗಳೂರಿನ ಕುಂಬಳಗೋಡಿನಲ್ಲಿ ಮೋಹನ್ ನಾಯಕ್ ಮನೆ ಬಾಡಿಗೆ ಪಡೆದಿದ್ದರು ಎಂದಷ್ಟೇ ಹೇಳಿದ್ದಾರೆ ಅಂತ ಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ ಏನು? :2017ರ ಸೆಪ್ಟೆಂಬರ್ 5 ರಂದು ಗೌರಿ ಲಂಕೇಶ್ ಅವರು ಕೆಲಸ ಮುಗಿಸಿ ಮನೆಗೆ ಮರಳಿದ ವೇಳೆ ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು. ಹತ್ಯೆಯ ಸಂಚು ರೂಪಿಸಿದ ಪ್ರಮುಖ ರೂವಾರಿ ಎಂದು ಅಮೋಲ್ ಕಾಳೆ ಮೇಲೆ ಆರೋಪವಿದ್ದರೆ, ಗುಂಡು ಹಾರಿಸಿದ ಆರೋಪ ಪರಶುರಾಮ್ ವಾಗ್ಮೋರೆ ಮೇಲೂ ಹಾಗೂ ಆತನನ್ನು ಕೂರಿಸಿಕೊಂಡು ಬೈಕ್ ಚಲಾಯಿಸಿ ತಪ್ಪಿಸಿಕೊಳ್ಳಲು ನೆರವಾದ ಆರೋಪವು ಗಣೇಶ್ ಮಿಸ್ಕಿನ್ ಮೇಲೆ ಇದೆ.

ಇದನ್ನೂ ಓದಿ :ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚನೆಗೆ ಸಿಎಂ ಸೂಚನೆ

ಅಮೋಲ್ ಕಾಳೆ, ಪರಶುರಾಮ್ ವಾಗ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ಬಾಡ್, ಅಮಿತ್ ದೆಗ್ವೇಕರ್, ಭರತ್ ಕುರಣೆ, ಸುರೇಶ್ ಹೆಚ್ ಎಲ್, ರಾಜೇಶ್ ಬಂಗೇರ, ಸುಧನ್ವ ಗೊಂದಲೇಕರ್, ಶರದ್ ಕಾಲಸ್ಕರ್, ಮೋಹನ್ ನಾಯಕ್, ವಾಸುದೇವ್ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ ಎಡವೆ, ವಿಕಾಸ್ ಪಾಟೀಲ್, ಶ್ರೀಕಾಂತ್ ಪಂಗರ್ಕರ್, ಕೆ ಟಿ ನವೀನ್ ಕುಮಾರ್ ಮತ್ತು ಹೃಶಿಕೇಶ್ ದಿಯೋದಿಕರ್ ಪ್ರಕರಣದ ಆರೋಪಿಗಳಾಗಿದ್ದಾರೆ. ಪ್ರಕರಣದ 11 ನೇ ಆರೋಪಿಯಾಗಿರುವ ಸಂಪಾಜೆ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.‌ ಇದೀಗ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

Last Updated : Dec 9, 2023, 10:17 AM IST

ABOUT THE AUTHOR

...view details