ಬೆಂಗಳೂರು: ಬಾಲಕನೊಬ್ಬನನ್ನು ಬಲವಂತವಾಗಿ ಲಿಂಗ ಪರಿವರ್ತನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವೈದ್ಯೆಯೊಬ್ಬರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್‌ಐಆರ್ ಮತ್ತು ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಡಾ.ಅನಿತಾ ಪಾಟೀಲ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಅವರ ನ್ಯಾಯಪೀಠ ಆದೇಶಿಸಿದೆ.
ಅಲ್ಲದೆ, ತಮ್ಮೆಲ್ಲ ವಾದವನ್ನು ವಿಚಾರಣಾ ನ್ಯಾಯಾಲಯದ ಮುಂದೆ ಮುಕ್ತವಾಗಿ ಮಂಡಿಸಬಹುದಾಗಿದೆ. ಅಲ್ಲಿಯೇ, ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಸ್ವತಂತ್ರರಿದ್ದೀರಿ ಎಂದು ಪೀಠ ತಿಳಿಸಿದೆ.
ಪ್ರಕರಣದ ಹಿನ್ನೆಲೆ : 2018ರ ಫೆ11ರಂದು ಸಾಕಮ್ಮ ಎಂಬುವರು ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ಟೌನ್ ಠಾಣಾ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಅರ್ಜಿದಾರೆ ವೈದ್ಯೆ ಅನಿತಾ ಪಾಟೀಲ್ ಹಾಗೂ ಇತರರು ತನ್ನ ಮೊಮ್ಮಗನನ್ನು ಅಪಹರಿಸಿ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಬಲವಂತವಾಗಿ ಲಿಂಗ ಪರಿವರ್ತನೆ ಮಾಡಿದ್ದಾರೆ ಎಂದು ಹೇಳಿದ್ದರು.
ತನಿಖೆ ನಡೆಸಿದ್ದ ಪೊಲೀಸರು ಅರ್ಜಿದಾರರ ವಿರುದ್ಧ ಅಪ್ರಾಪ್ತರ ಅಪಹರಣ, ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಮಾರಣಾಂತಿಕ ಹಲ್ಲೆ, ಮಕ್ಕಳ ಕಳ್ಳ ಸಾಗಣೆ ಸೇರಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೋ) ಕಾಯ್ದೆಯಡಿ, ಭಾರತೀಯ ದಂಡ ಸಂಹಿತೆ ಮತ್ತು ಬಾಲ ನ್ಯಾಯ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿ ವಿಚಾರಣಾ ನ್ಯಾಯಾಲಯಕ್ಕೆ 2019ರ ಜ.5ರಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದರಿಂದ ತಮ್ಮ ವಿರುದ್ಧದ ಪ್ರಕರಣ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದು ಪಡಿಸುವಂತೆ ಅರ್ಜಿದಾರರು ನ್ಯಾಯಾಲಯದಲ್ಲಿ ಕೋರಿದ್ದರು.
ಇದನ್ನೂ ಓದಿ :ಹಿಂದೂಗಳ ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿರುವುದು ಸಂತಸದ ವಿಚಾರ: ಕೆ ಎಸ್ ಈಶ್ವರಪ್ಪ