ದೇವನಹಳ್ಳಿ:ಕರ್ನಾಟಕದ ನಾಗರಾಧನೆಯ ಪ್ರಮುಖ ಧಾರ್ಮಿಕ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಡಿ.28 ರಂದು ನಡೆಯಲಿದೆ. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಘಾಟಿ ಸುಬ್ರಹ್ಮಣ್ಯ ದೇವಾಲಯದ 2022-23ನೇ ಸಾಲಿನ ಬ್ರಹ್ಮರಥೋತ್ಸವ ಪ್ರಯುಕ್ತ ಪೂರ್ವ ಸಿದ್ಧತೆ ಸಭೆ ನಡೆಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ ಮಾತನಾಡಿದ ಜಿಲ್ಲಾಧಿಕಾರಿ ಆರ್. ಲತಾ ಕೋವಿಡ್ ನಂತರ ಅದ್ದೂರಿಯಾಗಿ ಬ್ರಹ್ಮರಥೋತ್ಸವ ಆಚರಿಸಲಾಗುತ್ತಿದೆ. ಘಾಟಿ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಬೇಕು. ಸಾರ್ವಜನಿಕರು ಸ್ವ-ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ದೇವಾಲಯದ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರೋಗ್ಯ ಶಿಬಿರ ಹಾಗೂ ಪ್ರಥಮ ಚಿಕಿತ್ಸಾ ಕ್ರಮಗಳ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ನೆರೆ ರಾಜ್ಯಗಳು ಹಾಗೂ ವಿವಿಧ ಜಿಲ್ಲೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ದರ್ಶನ ವ್ಯವಸ್ಥೆ, ಪ್ರಸಾದ, ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ಸಾರಿಗೆ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡುವಂತೆ ಹಾಗೂ ಸುಗಮ ಸಂಗೀತ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಇನ್ನು ಸಂಚಾರ ದಟ್ಟಣೆ ಉಂಟಾಗದಂತೆ ತಡೆಯಲು ಹಾಗೂ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ ಈ. ರವಿಕುಮಾರ್, ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು ಹಾಗೂ ಘಾಟಿ ದೇವಾಲಯದ ಕಾರ್ಯ ನಿರ್ವಹಣಾ ಅಧಿಕಾರಿ ಹೇಮಾವತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:ಘಾಟಿ ಸುಬ್ರಹ್ಮಣ್ಯಕ್ಕೆ ಬರುವ ಭಕ್ತರಿಂದ ಬೇಕಾಬಿಟ್ಟಿ ಶುಲ್ಕ ವಸೂಲಿ: ವಾಹನ ಸವಾರರ ಆಕ್ರೋಶ