ಕರ್ನಾಟಕ

karnataka

ETV Bharat / state

ಕೆರೆಗಳ ಮೇಲೆ ಸೌರ ಫಲಕ ಅಳವಡಿಸುವ ಬಗ್ಗೆ ವಿಸ್ತೃತ ವರದಿ ನೀಡಿ: ಸಚಿವ ಬೋಸರಾಜು - ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞನ ಮಂಡಳಿ

ಕೆರೆಗಳ ಮೇಲೆ ಸೋಲಾರ್ ಪ್ಯಾನೆಲ್ ಅಳವಡಿಸುವ ಬಗ್ಗೆ ವಿಸ್ತೃತ ಸಂಶೋಧನಾ ವರದಿ ನೀಡಿ ಎಂದು ಸಚಿವ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

Minister Bhosaraju
ಸಚಿವ ಬೋಸರಾಜು

By ETV Bharat Karnataka Team

Published : Sep 30, 2023, 6:56 AM IST

ಬೆಂಗಳೂರು : ರಾಜ್ಯದ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕೆರೆಗಳ ಮೇಲೆ ಸೋಲಾರ್ ಪ್ಯಾನೆಲ್ ಅಳವಡಿಸುವುದರಿಂದ ಆಗುವ ಅನುಕೂಲಗಳು, ವಿದ್ಯುತ್ ಉತ್ಪಾದನೆಯ ಪ್ರಮಾಣ ಮುಂತಾದ ವಿಷಯಗಳ ಬಗ್ಗೆ ವಿಸ್ತೃತ ವರದಿಯನ್ನು ನೀಡುವಂತೆ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಅಧಿಕಾರಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಸೂಚನೆ ನೀಡಿದರು.

ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿರುವ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಐ ಐ ಎಸ್‌ ಸಿ (ಭಾರತೀಯ ವಿಜ್ಞಾನ ಸಂಸ್ಥೆಯ) ಸಹಯೋಗದಲ್ಲಿ ರಾಜ್ಯದ ಹಲವಾರು ಇಲಾಖೆಗಳ ಸಂಶೋಧನೆ ಹಾಗೂ ವರದಿಯನ್ನು ಸಿದ್ಧಪಡಿಸುತ್ತಿದೆ. ಹಾಗೆಯೇ, ತಾಂತ್ರಿಕ ಸಲಹೆಯನ್ನು ನೀಡುತ್ತಿದೆ. ಎನ್ಆರ್​ಡಿಎಂಎಸ್ ಮೂಲಕ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಹಾಯ ಮಾಡುತ್ತಿದೆ. ಅಲ್ಲದೆ, ಜನರಲ್ಲಿ ವೈಜ್ಞಾನಿಕ ಭಾವನೆ ಬೆಳೆಸುವಲ್ಲಿ ಪ್ರಮುಖ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು.

ಪ್ರಗತಿ ಪರಿಶೀಲನೆ ಸಭೆ

ಈ ಮಂಡಳಿಯು ಸೋಲಾರ್ ಎನರ್ಜಿಯ ಬಗ್ಗೆ ವಿಸ್ತೃತ ಯೋಜನಾ ವರದಿಯನ್ನು ನೀಡುವಂತಹ ಪ್ರಮುಖ ಸಂಸ್ಥೆಯಾಗಿದೆ. ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಏತ ನೀರಾವರಿ ಯೋಜನೆಗಳ ವಿದ್ಯುತ್ ಶುಲ್ಕವನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಫ್ಲೋಟಿಂಗ್ ಸೋಲಾರ್ ಪ್ಯಾನೆಲ್ ಅಳವಡಿಕೆಯ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಈ ಯೋಜನೆಯ ಬಗ್ಗೆ ವಿಸ್ತೃತ ಸಂಶೋಧನೆಯ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆಯ ಜೊತೆಗೂಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲಾಖೆಗಳ ನಡುವಿನ ಸಮನ್ವಯಕ್ಕೆ ಸೂಚನೆ : ಭಾರತೀಯ ವಿಜ್ಞಾನ ಸಂಸ್ಥೆಯ ವೈಜ್ಞಾನಿಕ ಹಾಗೂ ತಾಂತ್ರಿಕ ಜ್ಞಾನದ ಬಳಕೆಯಿಂದ ಮಂಡಳಿ ಅಂತರ್ಜಲ ಅಭಿವೃದ್ಧಿ, ಕೆರೆಗಳ ಪುನಶ್ಚೇತನ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಉತ್ತಮ ಸಲಹೆ ಸೂಚನೆ ನೀಡಬಹುದಾಗಿದೆ. ಈ ಮಂಡಳಿಯ ತಾಂತ್ರಿಕ ಪರಿಣಿತಿಯನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ಅಂತರ್ಜಲ ನಿರ್ದೇಶನಾಲಯ, ಸಣ್ಣ ನೀರಾವರಿ ಇಲಾಖೆ ಮತ್ತಿತರ ಇಲಾಖೆಗಳ ನಡುವೆ ಸಮನ್ವಯ ಬೇಕಾಗಿದೆ. ಅತ್ಯುತ್ತಮ ತಾಂತ್ರಿಕ ಪ್ರಾವಿಣ್ಯತೆಯನ್ನು ಹೊಂದಿರುವ ಐ ಐ ಎಸ್‌ ಸಿ ಮತ್ತು ಮಂಡಳಿಯ ಜ್ಞಾನದ ಲಾಭವನ್ನು ಇತರೆ ಇಲಾಖೆಗಳು ಪಡೆದುಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಸಭೆಯನ್ನು ಆಯೋಜಿಸುವುದಾಗಿ ತಿಳಿಸಿದರು.

ಗ್ರಾಸ್ ರೂಟ್ ಇನ್ನೋವೇಟರ್ಸ್​ಗಳ ಪ್ರೋತ್ಸಾಹ ಯೋಜನೆ: ರಾಜ್ಯದ ತಳಮಟ್ಟದ ಅನ್ವೇಷಕರುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಬಾರಿಯ ಆಯವ್ಯಯದಲ್ಲಿ 5 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದೆ. ಈ ಯೋಜನೆಯ ಅನುಷ್ಠಾನಕ್ಕೆ ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಕಾರ್ಯಕ್ರಮ ಹಮ್ಮಿಕೊಳ್ಳುವುದು ಸೂಕ್ತ. ಈ ನಿಟ್ಟಿನಲ್ಲಿ ಅಗತ್ಯ ರೂಪುರೇಷೆಗಳನ್ನು ರಚಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಮಳೆ ನೀರು ಕೊಯ್ಲು ಬಗ್ಗೆ ಗ್ರಾಮೀಣ ಮಟ್ಟದಲ್ಲಿ ತರಬೇತಿ : ಗ್ರಾಮೀಣ ಮಟ್ಟದಲ್ಲಿ ಮಳೆ ನೀರು ಕೊಯ್ಲು ಯೋಜನೆಯನ್ನು ಸಮರ್ಪಕವಾಗಿ ಅಳವಡಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಮಟ್ಟದಲ್ಲಿ ತರಬೇತಿ ಕಾರ್ಯಕ್ರಮ ಆಯೋಜಿಸಬೇಕು. ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಕಾರ್ಯದರ್ಶಿ ಪ್ರೊ. ಎಂ ಅಶೋಕ್ ರಾಯಚೂರು, ಕಾರ್ಯಕಾರಿ ಕಾರ್ಯದರ್ಶಿ ಡಾ. ಯು ಟಿ ವಿಜಯ್ ಮತ್ತು ಮಂಡಳಿಯ ಸಿಬ್ಬಂದಿ ಉಪಸ್ಥಿತರಿದ್ದರು.

ಇದನ್ನೂ ಓದಿ :ಕಾವೇರಿ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಬೇಕು : ಸಚಿವ ಎನ್​.ಎಸ್​ ಬೋಸರಾಜು

ABOUT THE AUTHOR

...view details