ಕರ್ನಾಟಕ

karnataka

ETV Bharat / state

ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೂ ಸುವರ್ಣ ಆರೋಗ್ಯ ಸುರಕ್ಷೆ ಸೌಲಭ್ಯ: ಹೈಕೋರ್ಟ್​ಗೆ ಮಾಹಿತಿ - Bengaluru

ಕರ್ನಾಟಕ ಸರ್ಕಾರ ವೈದ್ಯಕೀಯ ಶಿಕ್ಷಣ ಇಲಾಖೆ ಸಂಸ್ಥೆಗಳ ನೌಕರರ ಕ್ಷೇಮಾಭಿವೃದ್ಧಿ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಬಿ.ಎಸ್.ಪ್ರಶಾಂತ್ ಕುಮಾರ್ ಸಿದ್ದಪಡಿಸಿದ್ದ ಲಿಖಿತ ಹೇಳಿಕೆಯನ್ನು ಸರ್ಕಾರಿ ವಕೀಲ ವಿಕ್ರಂ ಹುಯಿಲ್ಗೋಳ್ ಅವರು ಪೀಠಕ್ಕೆ ಸಲ್ಲಿಸಿದರು.

ಹೈಕೋರ್ಟ್​
ಹೈಕೋರ್ಟ್​

By

Published : Sep 18, 2020, 6:36 PM IST

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಎಲ್ಲಾ ಸಿಬ್ಬಂದಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಯೋಜನೆಯಡಿ ನಗದು ರಹಿತ ಚಿಕಿತ್ಸೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿದೆ.

ಈ ಸಂಬಂಧ ಕರ್ನಾಟಕ ಸರ್ಕಾರ ವೈದ್ಯಕೀಯ ಶಿಕ್ಷಣ ಇಲಾಖೆ ಸಂಸ್ಥೆಗಳ ನೌಕರರ ಕ್ಷೇಮಾಭಿವೃದ್ಧಿ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಬಿ.ಎಸ್.ಪ್ರಶಾಂತ್ ಕುಮಾರ್ ಸಿದ್ದಪಡಿಸಿದ್ದ ಲಿಖಿತ ಹೇಳಿಕೆಯನ್ನು ಸರ್ಕಾರಿ ವಕೀಲ ವಿಕ್ರಂ ಹುಯಿಲ್ಗೋಳ್ ಅವರು ಪೀಠಕ್ಕೆ ಸಲ್ಲಿಸಿದರು.

ಬಳಿಕ ವಾದ ಮಂಡಿಸಿ, ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‌ನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. 2020ರ ಜೂ.23ರಂದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಯೋಜನೆಯಡಿ ಖಾಸಗಿ ಆಸ್ಪತ್ರೆಯಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಮೀಸಲಿರಿಸಲು ಅಧಿಸೂಚನೆ ಹೊರಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಉದ್ಯೋಗಿಗಳು ಸೇರಿ ಸಾರ್ವಜನಿಕ ಆರೋಗ್ಯ ಅಧಿಕಾರಿ ಶಿಫಾರಸು ಮಾಡುವ ಎಲ್ಲಾ ವ್ಯಕ್ತಿಗಳು ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ. ಅವರು ಹಣ ಪಾವತಿಸುವ ಅಗತ್ಯವಿಲ್ಲ. ಒಂದು ವೇಳೆ ಯಾರಾದರೂ ಸ್ವಯಿಚ್ಛೆಯಿಂದ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್​ಗೆ ಚಿಕಿತ್ಸೆ ಪಡೆದುಕೊಂಡರೆ, ಅಲ್ಲಿ ಸರ್ಕಾರ ನಿಗದಿಪಡಿಸಿರುವ ಸಂಪೂರ್ಣ ವೆಚ್ಚವನ್ನು ಅವರೇ ಭರಿಸಬೇಕು ಎಂದು ವಿವರಿಸಿದರು.

ಇದಕ್ಕೆ ಆಕ್ಷೇಪಿಸಿದ ಅರ್ಜಿದಾರ ಪರ ವಕೀಲರು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವೈದ್ಯಕೀಯ ಸಂಸ್ಥೆಗಳ ಸಿಬ್ಬಂದಿಗೆ ಚಿಕಿತ್ಸಾ ವೆಚ್ಚವನ್ನು ಮರು ಪಾವತಿಸುವಂತೆ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಒಂದು ವೇಳೆ ಯಾರಾದರೂ ಚಿಕಿತ್ಸಾ ವೆಚ್ಚ ಮರು ಪಾವತಿಗೆ ಮನವಿ ಸಲ್ಲಿಸಿದರೆ, ಅದನ್ನು ನಿಯಮಾನುಸಾರ ಪರಿಗಣಿಸಿ ಒಂದು ತಿಂಗಳಲ್ಲಿ ಇತ್ಯರ್ಥಪಡಿಸಬೇಕು. ಹಾಗೆಯೇ, ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ತಮ್ಮ ಸಿಬ್ಬಂದಿಯನ್ನು ಕೋವಿಡ್ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಿದರೆ, ಅದನ್ನು ಆರೋಗ್ಯ ಇಲಾಖೆಯ ಸಾರ್ವಜನಿಕ ಆರೋಗ್ಯ ಅಧಿಕಾರಿಯ ಶಿಫಾರಸ್ಸಿನಂತೆಯೇ ಪರಿಗಣಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿ, ಅರ್ಜಿ ಇತ್ಯರ್ಥಪಡಿಸಿತು.

ಕೋವಿಡ್-19 ನಿರ್ವಹಣೆಯಲ್ಲಿ ತೊಡಗಿಸಿಕೊಂಡಿರುವ ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳ ವೈದ್ಯರು ಹಾಗೂ ಸಿಬ್ಬಂದಿಗೆ ನಗದುರಹಿತ ಉಚಿತ ಚಿಕಿತ್ಸೆ ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದರು.

ABOUT THE AUTHOR

...view details